ಭೂ ವಂಚನೆ ಆರೋಪ ಸುಳ್ಳು: ನಿರಾಣಿ
ಕ.ಪ್ರ. ವಾರ್ತೆ ಬೆಂಗಳೂರು ಮಾ. 2
ಕೆಐಎಡಿಬಿಗೆ ಹಂಚಿಕೆಯಾಗಿದ್ದ ಭೂಮಿಯನ್ನು ಕಾನೂನು ಬಾಹಿರವಾಗಿ ರದ್ದುಗೊಳಿಸಿರುವ ಕುರಿತು ತಮ್ಮ ಮೇಲಿರುವ ಆರೋಪಗಳನ್ನು ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ತಳ್ಳಿಹಾಕಿದ್ದು, ಈ ಪ್ರಕರಣದಲ್ಲಿ ತಮ್ಮಿಂದ ಯಾವುದೇ ತಪ್ಪು ಆಗಿಲ್ಲ ಎಂದು ಹೇಳಿದ್ದಾರೆ.
ನಕಲಿ ದಾಖಲೆ ಸೃಷ್ಟಿಸಿ ಖಾಸಗಿ ಕಂಪನಿಗೆ ವಂಚಿಸಿದ ಆರೋಪ, ಆ ಕಂಪನಿಯ ದಾಖಲೆಗಳನ್ನು ತಿರುಚಲಾಗಿದೆ, ಉದ್ದೇಶಪೂರ್ವಕವಾಗಿ ಪಿತೂರಿ ಮಾಡಲಾಗಿದೆ. ಅಧಿಕಾರ ದುರುಪಯೋಗಪಡಿಸಿಕೊಳ್ಳಲಾಗಿದೆ ಎಂದ ತಮ್ಮ ಮೇಲೆ ಬಂದಿರುವ ಆರೋಪಗಳು ಅಚ್ಚರಿ ಮೂಡಿಸಿದೆ. ಈ ಕುರಿತು ಮುಂದಿನ ದಿನಗಳಲ್ಲಿ ಸೂಕ್ತ ದಾಖಲಾತಿಗಳೊಂದಿಗೆ ನ್ಯಾಯಾಲಯಕ್ಕೆ ಸ್ಪಷ್ಟ ಮಾಹಿತಿ ಒದಗಿಸುವುದಾಗಿ ತಿಳಿಸಿದ್ದಾರೆ.
ತಮ್ಮ ವಿರುದ್ಧದ ಆರೋಪಕ್ಕೆ ಸಂಬಂಧಿಸಿದಂತ ಲೋಕಾಯುಕ್ತ ಅಧಿಕಾರಿಗಳು ಲೋಕಾಯುಕ್ತ ನ್ಯಾಯಾಲಯಕ್ಕೆ ಶುಕ್ರವಾರ ಸಲ್ಲಿಸಿರುವ ಅಂತಿಮ ವರದಿಯಲ್ಲಿ ಆರೋಪ ನಿಜ ಎಂದು ಹೇಳಿರುವುದಾಗಿ ಬಂದಿರುವ ವರದಿಗಳ ಕುರಿತು ಅವರು ಈ ಸ್ಪಷ್ಟನೆ ನೀಡಿದ್ದಾರೆ. ಲೋಕಾಯುಕ್ತರು ನೀಡಿರುವ ಅಂತಿಮ ವರದಿಯ ಪ್ರತಿ ಲಭ್ಯವಾಗದ ಕಾರಣ ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡುವುದಿಲ್ಲ. ಆದರೆ, ನನ್ನ ವಿರುದ್ಧ ಲೋಕಾಯುಕ್ತ ನ್ಯಾಯಾಲದಲ್ಲಿ ದೂರು ನೀಡಿರುವ ಆಲಂ ಪಾಷ ಅವರ ಕುರಿತು ಮಾಹಿತಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ ಎಂದು ಹೇಳಿದ್ದಾರೆ.
ಸಚಿವನಾಗಿ ನನ್ನ ಅವಧಿಯಲ್ಲಿ ಕೈಗಾರಿಕೆಗೆ ಸಾಕಷ್ಟು ಶ್ರಮಿಸಿದ್ದೇನೆ. ಕೈಗಾರಿಕಾ ಕ್ಷೇತ್ರ ಸಾಕಷ್ಟು ಅಭಿವೃದ್ಧಿ ಕಂಡಿದೆ. ಯಾವ ಪ್ರಕರಣದಲ್ಲೂ ಅಧಿಕಾರ ದುರುಪಯೋಗಪಡಿಸಿಕೊಂಡು ಯಾವುದೇ ಉದ್ಯಮಿಗೆ ತೊಂದರೆ ನೀಡಿಲ್ಲ. ಆದ್ದರಿಂದ ಈ ಪ್ರಕರಣದಲ್ಲಿ ಸೂಕ್ತ ದಾಖಲೆಗಳೊಂದಿಗೆ ಹೋರಾಟ ನಡೆಸಿ ಜನರಿಗೆ ಸತ್ಯಾಂಶ ತಿಳಿಸುತ್ತೇನೆ. ಈ ಪ್ರಕರಣದಲ್ಲಿ ಉಂಟಾಗಿರುವ ಗೊಂದಲ ಶೀಘ್ರ ನಿವಾರಣೆಯಾಗಲಿದೆ ಎಂದು ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.