ತಂತ್ರಗಾರಿಕೆಗೆ ರಾಹುಲ್ ಜತೆ ರಾಜ್ಯ ನಾಯಕರ ಸುದೀರ್ಘ ಚರ್ಚೆ
ನವದೆಹಲಿ: ಕರ್ನಾಟಕ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ, ಪ್ರಚಾರ ತಂತ್ರ ಮತ್ತು ಪ್ರಣಾಳಿಕೆ ಕುರಿತಂತೆ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಸುಧೀರ್ಘ ಚರ್ಚೆ ನಡೆಸಿದ್ದಾರೆ.
ಗುರುವಾರ ಎಐಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ ಮತ್ತು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿದ ರಾಹುಲ್ ಟಿಕೆಟ್ ಹಂಚಿಕೆಯಲ್ಲಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಸಮಾಲೋಚನೆ ನಡೆಸಿದರು.
ಭ್ರಷ್ಟರನ್ನು ದೂರವಿಡಬೇಕು. ಪಕ್ಷನಿಷ್ಠರಿಗೆ ಮತ್ತು ಯುವಕರಿಗೆ ಆದ್ಯತೆ ನೀಡಬೇಕು. ಮಹಿಳೆಯರಿಗೆ ಹೆಚ್ಚಿನ ಅವಕಾಶ ಕಲ್ಪಿಸಬೇಕು ಎಂಬುದು ಚರ್ಚೆಯ ಪ್ರಮುಖ ಅಂಶಗಳು.
ಲೂಸಿನೋ ಫೆಲೆರೋ ನೇತೃತ್ವದ ಸ್ಕ್ರೀನಿಂಗ್ ಕಮಿಟಿ ಮತ್ತು ರಕ್ಷಣಾ ಸಚಿವ ಎ.ಕೆ.ಆ್ಯಂಟನಿ ನೇತೃತ್ವದ ಚುನಾವಣಾ ಸಮಿತಿ ಸಭೆಗೆ ಪೂರ್ವಭಾವಿಯಾಗಿ ಈ ಸಭೆ ನಡೆಸಲಾಗಿದೆ.
ಹೊರಗಿನವರಿಗೆ ಟಕೆಟ್ ಬೇಡ: ಚುನಾವಣೆ ವೇಳೆ ಟಿಕೆಟ್ಗಾಗಿ ಪಕ್ಷಕ್ಕೆ ಬರುವವರಿಗೆ ಆದ್ಯತೆ ನೀಡಬಾರದು. ಅನಿವಾರ್ಯ ಸಂದರ್ಭಗಳಲ್ಲಿ ಸ್ಥಳೀಯ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು, ಸ್ಥಳೀಯರ ವಿರೋಧ ಇದ್ದರೆ ಹೊರಗಿನವರಿಗೆ ಟಿಕೆಟ್ ನೀಡಬಾರದು ಎಂಬ ಬಗ್ಗೆಯೂ ಚರ್ಚಿಸಲಾಗಿದೆ ಎಂದು ತಿಳಿದು ಬಂದಿದೆ.
ಸುಮಾರು ನೂರು ನಿಮಿಷಗಳ ಕಾಲ ನಡೆದ ಸಮಾಲೋಚನೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಗೆಲ್ಲಬಹುದಾದ ಕ್ಷೇತ್ರಗಳು, ಕಡಿಮೆ ಅಂತರದಲ್ಲಿ ಸೋಲುವ ಕ್ಷೇತ್ರಗಳು ಹಾಗೂ ಕಾಂಗ್ರೆಸ್ ಪ್ರಾಬಲ್ಯವೇ ಇಲ್ಲದ ಕ್ಷೇತ್ರಗಳ ಬಗ್ಗೆ ಚರ್ಚಿಸಲಾಗಿದ್ದು, ಆಯಾ ಕ್ಷೇತ್ರಗಳಿಗನುಗುಣವಾಗಿ ಕಾರ್ಯತಂತ್ರ ರೂಪಿಸಲು ನಿರ್ಧರಿಸಲಾಗಿದೆ.
ಋಣಾತ್ಮಕ ಪ್ರಚಾರಕ್ಕೆ ಅವಕಾಶ ಇರಬಾರದು, ಧನಾತ್ಮಕವಾಗಿಬೇಕು ಎಂಬ ಸಲಹೆಯನ್ನು ನೀಡಲಾಗಿದೆ ಎಂದು ತಿಳಿದು ಬಂದಿದೆ.
ರಾಹುಲ್ ಭೇಟಿ ನಂತರ ಮಾತನಾಡಿದ ಡಾ. ಪರಮೇಶ್ವರ, ಅಭ್ಯರ್ಥಿಗಳ ಆಯ್ಕೆ ಬಗ್ಗೆಯಾಗಲೀ, ಚುನಾವಣೆ ಬಗ್ಗೆಯಾಗಲಿ ಚರ್ಚಿಸಿಲ್ಲ, ಪಕ್ಷ ಸಂಘಟನೆ ಬಗ್ಗೆ ಚರ್ಚಿಸಿದ್ದೇವೆ ಎಂದರು. ಏಪ್ರಿಲ್ ಮೊದಲ ವಾರದಲ್ಲಿ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗುತ್ತದೆ. ಕೆಲವು ಕ್ಷೇತ್ರಗಳಲ್ಲಿ ಎರಡು ಮೂರು ಹೆಸರುಗಳನ್ನು ಪ್ರಸ್ತಾಪಿಸಲಾಗಿದೆ. ಸಮಾಲೋಚನೆ ನಂತರ ಆಯ್ಕೆ ಮಾಡಲಾಗುತ್ತದೆ ಎಂದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.