ಅಂಬಿ ಸ್ಪರ್ಧೆಗೆ ಅಡ್ಡಿ
ಮೈಸೂರು/ಮಂಡ್ಯ: ಮಂಡ್ಯ ವಿಧಾನಸಭಾ ಕ್ಷೇತ್ರದಿಂದ ಮಾಜಿ ಸಂಸದ ಡಾ.ಅಂಬರೀಷ್ ಸ್ಪರ್ಧಿಸುವುದು ಬೇಡ ಎಂದು ಮಾಜಿ ಸಚಿವ ಆತ್ಮಾನಂದ ಬೆಂಬಲಿಗರು ಒತ್ತಾಯಿಸುವ ಮೂಲಕ ಪರೋಕ್ಷವಾಗಿ ವಿರೋಧ ವ್ಯಕ್ತಪಡಿಸಿದ್ದಾರೆ.
ಮೈಸೂರಿನ ಖಾಸಗಿ ಹೊಟೇಲ್ನಲ್ಲಿ ವಾಸ್ತವ್ಯ ಹೂಡಿದ್ದ ನಟ ಅಂಬರೀಷ್ ಅವರನ್ನು ಶನಿವಾರ ಭೇಟಿ ಮಾಡಿರುವ ಮಂಡ್ಯ ಜಿಲ್ಲಾ ಕಾಂಗ್ರೆಸ್ ಮುಖಂಡರು, ನಗರಸಭಾ ಸದಸ್ಯರಿದ್ದ ನಿಯೋಗವು, ಮಂಡ್ಯ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುವುದು ಬೇಡ. ಕಳೆದ ಬಾರಿ ಸ್ಪರ್ಧಿಸಿದ್ದ ಶ್ರೀರಂಗಪಟ್ಟಣ ಕ್ಷೇತ್ರದಿಂದಲೇ ನೀವು ಕಣಕ್ಕೆ ಇಳಿಯುವಂತೆ ಮನವಿ ಮಾಡಿದ್ದಾರೆ.
ಟಿಕೆಟ್ ಆಕಾಂಕ್ಷಿತರ ಪಟ್ಟಿಯಲ್ಲಿ ಈಗಾಗಲೇ ಡಾ.ಅಂಬರೀಷ್ ಜೊತೆಗೆ, ಮಾಜಿ ಸಚಿವ ಆತ್ಮಾನಂದ ಹೆಸರೂ ಇದೆ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಚಿದಂಬರ, ಹಿರಿಯ ಕಾಂಗ್ರೆಸ್ಸಿಗ ರಾಮಲಿಂಗಯ್ಯ ಹೆಸರು ಕೂಡ ಪಟ್ಟಿಗೆ ಸೇರ್ಪಡೆಯಾಗಿದೆ ಎನ್ನಲಾಗಿದೆ. ಕಳೆದ ಬಾರಿ ಅಲ್ಪ ಮತಗಳಿಂದ ಸೋತಿದ್ದು, ಈ ಬಗ್ಗೆ ಜನರಿಗೂ ಅನುಕಂಪವಿದೆ. ನೀವು ಶ್ರೀರಂಗಪಟ್ಟಣದಿಂದಲೇ ಸ್ಪರ್ಧಿಸಬೇಕು. ಮಾಜಿ ಸಚಿವ ಆತ್ಮಾನಂದ ಅವರು ಮಂಡ್ಯ ನಗರದವರು. ಅವರು ಅಲ್ಲಿಂದಲೇ ಕಣಕ್ಕಿಳಿಯಬೇಕು. ಆಗ ಈ ಎರಡೂ ಕ್ಷೇತ್ರಗಳು ಕಾಂಗ್ರೆಸ್ ಪಾಲಾಗುತ್ತವೆ ಎಂದು ನಿಯೋಗ ಅಂಬಿಯವರಿಗೆ ಮನವರಿಕೆ ಮಾಡಿದೆ ಎನ್ನಲಾಗಿದೆ. ಅಷ್ಟೇ ಅಲ್ಲ ಈ ಕುರಿತು ಕಾಂಗ್ರೆಸ್ ಹೈಕಮಾಂಡ್ ಗಮನಕ್ಕೆ ತರಲು ಕೆಲವು ನಾಯಕರು ನಿರ್ಧರಿಸಿದ್ದಾರೆ ಎಂದು ಹೇಳಲಾಗುತ್ತಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.