ಬೆಂಗಳೂರು: ರಾಜ್ಯ ಸರ್ಕಾರದ ರೈತ, ದಲಿತ ಮತ್ತು ಹಿಂದುಳಿದ ವರ್ಗಗಳ ವಿರೋಧಿ ನೀತಿ ವಿರೋಧಿಸಿ ಲೋಕಸಭಾ ಕಲಾಪದ ಬಳಿಕ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ದೆಹಲಿಯಲ್ಲಿ ಬುಧವಾರ ನಡೆದ ಕೋರ್ ಕಮಿಟಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಲೋಕಸಭೆ ಅಧಿವೇಶನ ಮುಗಿದ ಬಳಿಕ ಕೇಂದ್ರ ಸಚಿವರು, ರಾಜ್ಯಾಧ್ಯಕ್ಷರು, ಸಂಸದರು ಸೇರಿದಂತೆ ಪಕ್ಷದ ಎಲ್ಲ ನಾಯಕರು ರಾಜ್ಯಾದ್ಯಂತ ಪ್ರವಾಸ ಕೈಗೊಂಡು ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಮತ್ತು ಜನಜಾಗೃತಿ ಸಭೆಗಳನ್ನು ನಡೆಸಲಾಗುವುದು ಎಂದು ಪತ್ರಿಕಾಗೋಷ್ಠಿಯಲ್ಲಿ ಗುರುವಾರ ತಿಳಿಸಿದರು.
ರಾಜ್ಯ ಸರ್ಕಾರ ರೈತರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ಪರಿಶಿಷ್ಟ ಜಾತಿ, ಪಂಗಡ ಮತ್ತು ಹಿಂದುಳಿದ ವರ್ಗ ವಿದ್ಯಾರ್ಥಿಗಳ ಹಾಸ್ಟೆಲ್ ವಿಚಾರದಲ್ಲಿ ನಿರ್ಲಕ್ಷ್ಯ ಮಾಡುತ್ತಿದೆ. ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ ಅನುದಾನ ಸಮರ್ಪಕವಾಗಿ ಬಳಸಿಕೊಳ್ಳದೆ ವಿನಾಕಾರಣ ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದೆ. ರಾಜ್ಯ ಸರ್ಕಾರದ ಈ ಎಲ್ಲ ವೈಫಲ್ಯಗಳನ್ನು ಜನರಿಗೆ ತಿಳಿಸಲು ಹೋರಾಟ ಕೈಗೊಳ್ಳಲಾಗುವುದು ಎಂದು ಹೇಳಿದರು.