ರಾಜಕೀಯ

ಲಾಲು ಪ್ರಸಾದ್ ಯಾದವ್ ಕುಟುಂಬ ರಾಜಕಾರಣಕ್ಕೆ ಕೇಜ್ರಿವಾಲ್ ವಿರೋಧ

Srinivas Rao BV

ನವದೆಹಲಿ: ಲಾಲು ಪ್ರಸಾದ್ ಯಾದವ್ ಅವರ ಕುಟುಂಬ ರಾಜಕಾರಣಕ್ಕೆ ವಿರುದ್ಧ ಇರುವುದಾಗಿ ದೆಹಲಿ ಮುಖ್ಯಮಂತ್ರಿ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್, ಲಾಲು ಪ್ರಸಾದ್ ಯಾದವ್ ಅವರನ್ನು ಅಪ್ಪಿಕೊಂಡು  ಫೋಟೊ ತೆಗೆಸಿಕೊಂಡಿರುವುದು ಚರ್ಚೆಗೆ ಗ್ರಾಸವಾಗಿದೆ. ಈ ಬಗ್ಗೆ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಕೌನ್ಸಿಲ್ ಸಭೆಯಲ್ಲಿ ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿರುವ ಕೇಜ್ರಿವಾಲ್, ಲಾಲು ಪ್ರಸಾದ್ ಯಾದವ್ ಅವರು ನಡೆಸುತ್ತಿರುವ ಕುಟುಂಬ ರಾಜಕಾರಣ, ಭ್ರಷ್ಟಾಚಾರವನ್ನು ನಾವು ಎಂದಿಗೂ ವಿರೋಧಿಸುತ್ತೇವೆ.
ಆರ್ ಜೆಡಿಯೊಂದಿಗೆ ಆಮ್ ಆದ್ಮಿ ಪಕ್ಷ ಯಾವುದೇ ಮೈತ್ರಿ ಮಾಡಿಕೊಂಡಿಲ್ಲ. ಲಾಲು ಪ್ರಸಾದ್ ಅವರ ಇಬ್ಬರು ಮಕ್ಕಳು ನಿತೀಶ್ ಕುಮಾರ್ ಸಂಪುಟದಲ್ಲಿ ಸಚಿವರಾಗಿದ್ದಾರೆ ಇದಕ್ಕೂ ತಮ್ಮ ವಿರೋಧವಿದೆ ಎಂದು ಕೇಜ್ರಿವಾಲ್ ತಿಳಿಸಿದ್ದಾರೆ. ನಿತೀಶ್ ಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಲಾಲು ಪ್ರಸಾದ್ ಯಾದವ್ ಅವರೇ ತಮ್ಮ ಕೈಲುಕಿ ಅಪ್ಪಿಕೊಂಡರು ಎಂದು ಆಪ್ ಸಭೆಯಲ್ಲಿ ಕೇಜ್ರಿವಾಲ್ ಸ್ಪಷ್ಟಪಡಿಸಿದ್ದಾರೆ.
ನಾನು ಲಾಲು ಪ್ರಸಾದ್ ಅವರೊಂದಿಗೆ ಫೋಟೋ ತೆಗೆಸಿಕೊಂಡಿರುವುದನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನೆ ಮಾಡಲಾಗುತ್ತಿದೆ. ಇದು ಒಳ್ಳೆಯ ಬೆಳವಣಿಗೆ ಜನರಿಗೆ ಆಮ್ ಆದ್ಮಿ ಪಕ್ಷದ ಮೇಲೆ ಇನ್ನೂ ನಂಬಿಕೆ ಇರುವುದರಿಂದ ಈ ರೀತಿ ಪ್ರಶ್ನೆ ಮಾಡುತ್ತಿದ್ದಾರೆ. ಬೇರೆ ಯಾವುದೇ ರಾಜಕಾರಣಿ ಲಾಲು ಪ್ರಸಾದ್ ಯಾದವ್ ಅವರೊಂದಿಗೆ ಈ ರೀತಿ ಫೋಟೊ ತೆಗೆಸಿಕೊಂಡಿದ್ದರೆ, ಅದನ್ನು ಜನರು ಪ್ರಶ್ನೆ ಮಾಡುತ್ತಿರಲಿಲ್ಲ ಎಂದಿದ್ದು, ನಿತೀಶ್ ಕುಮಾರ್ ಅವರನ್ನು ಬೆಂಬಲಿಸಿರುವುದನ್ನು ಸಮರ್ಥಿಸಿಕೊಂಡಿದ್ದಾರೆ.

SCROLL FOR NEXT