ರಾಜಕೀಯ

ಕಾಂಗ್ರೆಸ್ ಸೇರಿದ ಕಾರವಾರ ಶಾಸಕ ಸತೀಶ್ ಸೈಲ್

Lingaraj Badiger

ಬೆಂಗಳೂರು: ಬೇಲೆಕೇರಿ ಅದಿರು ನಾಪತ್ತೆ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿದ್ದ ಕಾರವಾರ ಕ್ಷೇತ್ರದ ಪಕ್ಷೇತರ ಶಾಸಕ ಸತೀಶ್ ಸೈಲ್ ಅವರು ಶುಕ್ರವಾರ ಕಾಂಗ್ರೆಸ್ ಸೇರಿದ್ದಾರೆ.

ಇಂದು ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಮತ್ತು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರ ಸಮ್ಮುಖದಲ್ಲಿ ಸತೀಶ್ ಸೈಲ್ ತಮ್ಮ ಬೆಂಬಲಿಗರೊಂದಿಗೆ ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಟಿಕೆಟ್ ಸಿಗಲಿಲ್ಲ ಎಂಬ ಕಾರಣಕ್ಕೆ ಪಕ್ಷ ತೊರೆದು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಜಯಗಳಿಸಿದ್ದರು. ಆದರೆ ಕಾಂಗ್ರೆಸ್ ಪಕ್ಷ ತರೆದರೂ ಪಕ್ಷದ ನಾಯಕರ ಜೊತೆ ಅವರು ಉತ್ತಮ ಬಾಂಧವ್ಯ ಹೊಂದಿದ್ದರು. ಹೀಗಾಗಿ ಸುಮಾರು ಎರಡು ವರ್ಷಗಳ ನಂತರ ಮತ್ತೆ ಪಕ್ಷಕ್ಕೆ ಮರಳಿದ್ದಾರೆ.

2013ರ ವಿಧಾನಸಭೆ ಚುನಾವಣೆಯಲ್ಲಿ ಕಾರವಾರ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸತೀಶ್ ಸೈಲ್ ಅವರು, 80,727 ಮತಗಳನ್ನು ಪಡೆದು ಬಿಜೆಪಿ ಅಭ್ಯರ್ಥಿ ಆನಂದ್ ಆಸ್ನೋಟಿಕರ್ ಅವರ ವಿರುದ್ಧ ಜಯಗಳಿಸಿದ್ದರು.

 2009 ರಿಂದ 2011ರ ನಡುವೆ ಬಳ್ಳಾರಿಯಲ್ಲಿ ನಡೆದ ಅಕ್ರಮ ಗಣಿಗಾರಿಕೆಯಲ್ಲಿ ಸತೀಶ್ ಸೈಲ್ ಭಾಗಿಯಾಗಿದ್ದಾರೆ ಎಂಬ ಆರೋಪವೂ ಇದೆ. ಸಿಬಿಐ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಸತೀಶ್ ಸೈಲ್ ಅವರನ್ನು ಬಂಧಿಸಿತ್ತು.

SCROLL FOR NEXT