ಬೆಂಗಳೂರು: ತಾಲೂಕ ಪಂಚಾಯತ್ ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಪಕ್ಷದ ವಿರುದ್ಧವೇ ಬಹಿರಂಗವಾಗಿ ಪ್ರಚಾರ ಮಾಡುತ್ತಿರುವ ಕಾಂಗ್ರೆಸ್ ಬಂಡಾಯ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಅವರಿಗೆ ವಿಪ್ ಜಾರಿ ಮಾಡಲು ಕಾಂಗ್ರೆಸ್ ನಿರ್ಧರಿಸಿದೆ.
ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ಕ್ಷೇತ್ರದ ಶಾಸಕರಾಗಿರುವ ನಡಹಳ್ಳಿ ಅವರು ಈ ಹಿಂದೆ ಕಳೆದ ಆರು ದಶಕಗಳಿಂದ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಕಾಂಗ್ರೆಸ್ ಏನನ್ನೂ ಮಾಡಿಲ್ಲ ಎಂದು ಆರೋಪಿಸಿದ್ದರು. ಅಲ್ಲದೆ ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧವೂ ಬಹಿರಂಗ ವಾಗ್ದಾಳಿ ನಡೆಸಿದ್ದರು.
ಇದೀಗ ನಡಹಳ್ಳಿ ಅವರು ತಾಲೂಕು ಪಂಚಾಯತ್ ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಬಹಿರಂಗವಾಗಿಯೇ ಪ್ರತಿಪಕ್ಷ ಜೆಡಿಎಸ್ ಪರ ಪ್ರಚಾರ ಮಾಡುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಕಾಂಗ್ರೆಸ್ ನಾಯಕರು, ಅವರ ವಿರುದ್ಧ ವಿಪ್ ಜಾರಿ ಮಾಡಲು ನಿರ್ಧರಿಸಿದ್ದಾರೆ.
ನಡಹಳ್ಳಿ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಅವರ ಶಾಸಕತ್ವವನ್ನು ರದ್ದುಗೊಳಿಸಲಾಗುವುದು ಎಂದು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ್ ಅವರು ಹೇಳಿದ್ದಾರೆ.
ನಡಹಳ್ಳಿ ಅವರ ಪಕ್ಷ ವಿರೋಧಿ ಚಟುವಟಿಕೆ ಸಂಬಂಧಿಸಿದಂತೆ ನಮಗೆ ಬಲವಾದ ಸಾಕ್ಷ್ಯ ಸಿಕ್ಕಿದೆ. ಪಂಚಾಯತ್ ಚುನಾವಣೆ ಬಳಿಕ ಅವರ ಸದಸ್ಯತ್ವವನ್ನು ಅನರ್ಹಗೊಳಿಸಲಾಗುವುದು ಎಂದು ಪಾಟೀಲ್ ತಿಳಿಸಿದ್ದಾರೆ.
ಈ ಮಧ್ಯೆ ಶಾಸಕ ನಡಹಳ್ಳಿ ಅವರು ಜೆಡಿಎಸ್ ಸೇರುವ ಸಿದ್ಧತೆ ನಡೆಸಿದ್ದು, ಮುಂದಿನ ವಿಧಾಸಭೆ ಚುನಾವಣೆಯಲ್ಲಿ ಜೆಡಿಎಸ್ ನಿಂದಲೇ ಸ್ಪರ್ಧಿಸಲಿದ್ದಾರೆ ಎನ್ನಲಾಗಿದೆ.