ಮೈಸೂರು: ಮೈಸೂರು ಜಿಲ್ಲಾಧಿಕಾರಿ ಸಿ.ಶಿಖಾ ಅವರಿಗೆ ಬೆದರಿಕೆ ಹಾಕಿ, ತಲೆಮರೆಸಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಹಾಗೂ ಮೈಸೂರು ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ಕೆ.ಮರಿಗೌಡ ಅವರನ್ನು ಪಕ್ಷದಿಂದ ಉಚ್ಚಾಟಿಸಲು ನಿರ್ಧರಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಶನಿವಾರ ಹೇಳಿದ್ದಾರೆ.
ಇಂದು ಮೈಸೂರಿನಲ್ಲಿ ಮರಿಗೌಡ ಪ್ರಕರಣದ ಬಗ್ಗೆ ವರದಿಗಾರರಿಗೆ ಪ್ರತಿಕ್ರಿಯಿಸಿದ ಪರಮೇಶ್ವರ ಅವರು, ಪ್ರಕರಣದಲ್ಲಿ ರಾಜ್ಯ ಸರ್ಕಾರ ಯಾವುದೇ ರೀತಿಯ ಹಸ್ತಕ್ಷೇಪ ಮಾಡುವುದಿಲ್ಲ. ಪೊಲೀಸರು ಈಗಾಗಲೇ ಆರೋಪಿಯ ಬಂದನಕ್ಕೆ ಬಲೆ ಬೀಸಿದ್ದಾರೆ ಎಂದು ಹೇಳಿದರು.
ಮರಿಗೌಡ ರಕ್ಷಣೆಗೆ ಗೃಹ ಇಲಾಖೆ ಯತ್ನಿಸುತ್ತಿದ್ದು, ಗೃಹ ಸಚಿವರ ಸಲಹೆಗಾರರಾದ ನಿವೃತ್ತ ಐಪಿಎಸ್ ಅಧಿಕಾರಿ ಕೆಂಪಯ್ಯ ಅವರು ಶಿಖಾ ಜೊತೆ ರಾಜಿ ಸಂಧಾನಕ್ಕೆ ಯತ್ನಿಸುತ್ತಿದ್ದಾರೆ ಎಂದು ಈ ಹಿಂದೆ ಮಾಧ್ಯಮಗಳು ವರದಿ ಮಾಡಿದ್ದವು.
ಮರಿಗೌಡ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದ್ದು, ಬಂಧನ ಭೀತಿಯಲ್ಲಿರುವ ಸಿಎಂ ಆಪ್ತ ಕೇರಳದ ಕೊಟ್ಟಂನ ಖಾಸಗಿ ಹೊಟೇಲ್‌ನಲ್ಲಿ ವಾಸ್ತವ್ಯ ಹೂಡಿದ್ದಾನೆ ಎನ್ನಲಾಗಿದೆ.
ಇದೇ ವೇಳೆ ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದ ಮೂರನೇ ಆರೋಪಿ ಎ.ಎಂ.ಪ್ರಸಾದ್ ಅವರಿಗೆ ಹೊಸ ಹುದ್ದೆ ಸೃಷ್ಟಿಸಲಾಗಿದೆ ಎಂಬುದನ್ನು ತಳ್ಳಿಹಾಕಿದ ಗೃಹ ಸಚಿವರು, ಬೆಂಗಳೂರು ಸಂಚಾರ ವಿಭಾಗದ ಆಯುಕ್ತರ ಹುದ್ದೆ ಮೊದಲಿನಿಂದಲೂ ಇದೆ ಎಂದರು.