ಬೆಂಗಳೂರು: ತಮ್ಮನ್ನು ಸಚಿವ ಸ್ಥಾನದಿಂದ ಕೈಬಿಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿ ಅತೃಪ್ತರ ತಂಡ ಸೇರಿದ್ದ ಮಾಜಿ ಸಚಿವ ಖಮರುಲ್ ಇಸ್ಲಾಂ ಗುರುವಾರ ಯೂಟರ್ನ್ ಹೊಡೆದಿದ್ದು, ನಾನು ಸಿಎಂ ಬದಲಾವಣೆ ಮಾಡಬೇಕೆಂದು ಹೇಳಿಲ್ಲ. ನಾಯಕತ್ವ ಬದಲಾವಣೆ ವಿಚಾರ ಹೈಕಮಾಂಡ್ ಗೆ ಬಿಟ್ಟ ವಿಚಾರ ಎಂದು ಹೇಳಿದ್ದಾರೆ.
ಇಂದು ಬೆಳಗ್ಗೆ ಸಿಎಂ ನಿವಾಸ ಕಾವೇರಿಯಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಖಮರುಲ್ ಇಸ್ಲಾಂ ಅವರು, ಸಿಎಂ ನನಗೆ ಪಕ್ಷದಲ್ಲಿ ಸ್ಥಾನಮಾನ ಕಲ್ಪಿಸುವ ಬಗ್ಗೆ ಭರವಸೆ ನೀಡಿದ್ದಾರೆ ಎಂದರು.
ನಾಯಕತ್ವ ಬದಲಾವಣೆ ಮಾಡಬೇಕೆಂದು ನಾನು ಹೇಳಿಲ್ಲ, ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಅವರ ಪ್ರಸ್ತಾಪಕ್ಕೆ ತನ್ನ ಸಹಮತ ಇಲ್ಲ ಎಂದು ಹೇಳಿದರು.
ಇತ್ತೀಚೆಗಷ್ಟೇ ಸಚಿವ ಸಂಪುಟ ಪುನಾರಚನೆಯಲ್ಲಿ ಖಮರುಲ್ ಇಸ್ಲಾಂ ಅವರನ್ನು ಸಚಿವ ಸ್ಥಾನದಿಂದ ಕೈಬಿಡಲಾಗಿತ್ತು. ಇದರಿಂದ ಅಸಮಾಧಾನಗೊಂಡಿದ್ದ ಖಮರುಲ್ ಮತ್ತು ಬಾಬುರಾವ್ ಚಿಂಚನಸೂರ್ ಪತ್ರಿಕಾಗೋಷ್ಠಿ ನಡೆಸಿ ಸಿಎಂ ಮತ್ತು ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದರು.