ರಾಜಕೀಯ

ರಾಜ್ಯಸಭೆ ಚುನಾವಣೆಯಲ್ಲಿ ಕುದುರೆ ವ್ಯಾಪಾರ; 10 ಕಾಂಗ್ರೆಸ್ ಶಾಸಕರಿಗೆ ಜೆಡಿಎಸ್ ಆಮಿಷ: ಗುಪ್ತಚರ ವರದಿ

Lingaraj Badiger
ಬೆಂಗಳೂರು: ರಾಜ್ಯಸಭೆ ಹಾಗೂ ವಿಧಾನ ಪರಿಷತ್ ಚುನಾವಣೆಯಲ್ಲಿ ಭರ್ಜರಿ ಕುದರೆ ವ್ಯಾಪಾರ ನಡೆಯುತ್ತಿದ್ದು, ಚುನಾವಣೆಯಲ್ಲಿ ಶತಾಯಗತಾಯ ಗೆಲುವು ಸಾಧಿಸಲು ಜೆಡಿಎಸ್ 10 ಕಾಂಗ್ರೆಸ್ ಶಾಸಕರಿಗೆ ಹಣದ ಆಮಿಷ ಒಡ್ಡಿದೆ ಎಂದು ರಾಜ್ಯ ಗುಪ್ತಚರ ಇಲಾಖೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವರದಿ ನೀಡಿದೆ.
ಜೂನ್ 10ರಂದು ವಿಧಾನಪರಿಷತ್ ಚುನಾವಣೆ ಹಾಗೂ ಜೂನ್ 11ರಂದು ರಾಜ್ಯಸಭೆ ಚುನಾವಣೆ ನಡೆಯುತ್ತಿದ್ದು, ಕಾಂಗ್ರೆಸ್ ಶಾಸಕರ ಮೇಲೆ ಗುಪ್ತಚರ ಇಲಾಖೆ ಕಣ್ಣಿಟ್ಟಿದ್ದು, ಕಾಂಗ್ರೆಸ್ ಶಾಸಕರಾದ ಎ.ಬಿ.ಮಾಲಕರೆಡ್ಡಿ ಹಾಗೂ ಕೆ.ಬಿ. ಕೋಳಿವಾಡ್ ಸೇರಿದಂತೆ 10ಕ್ಕೂ ಹೆಚ್ಚು ಶಾಸಕರನ್ನು ಜೆಡಿಎಸ್ ಸಂಪರ್ಕಿಸಿದೆ.
ಗುಪ್ತಚರ ಇಲಾಖೆ ವರದಿಯನ್ನು ಶಾಸಕರು ತಳ್ಳಿಹಾಕಿದ್ದು, 'ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕದಿದ್ದರೆ ಅದು ಮಹಾದ್ರೋಹವಾಗುತ್ತದೆ. ಜೆಡಿಎಸ್‌ನ ಯಾವುದೇ ಶಾಸಕರು, ಮಧ್ಯವರ್ತಿಗಳು ನಮ್ಮನ್ನು ಸಂಪರ್ಕಿಸಿಲ್ಲ' ಎಂದು ಕೆ.ಬಿ.ಕೋಳಿವಾಡ ಸ್ಪಷ್ಟಪಡಿಸಿದ್ದಾರೆ. ಅಲ್ಲದೆ ಸಿಎಂಗೆ ಗುಪ್ತಚರ ಇಲಾಖೆ ವರದಿ ನೀಡಿರುವ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ ಎಂದಿದ್ದಾರೆ.
ಇನ್ನು ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು, ನಮ್ಮ ಪಕ್ಷದಲ್ಲಿ ಯಾವುದೇ ಕುದುರೆಗಳು ವ್ಯಾಪರಕ್ಕಿಲ್ಲ ಮತ್ತು ಕಾಂಗ್ರೆಸ್ ಸಹ ಯಾವುದೇ ಕುದುರೆ ವ್ಯಾಪಾರ ಮಾಡುತ್ತಿಲ್ಲ ಎಂದು ಜೆಡಿಎಸ್ ಗೆ ತಿರುಗೇಟು ನೀಡಿದ್ದಾರೆ.
SCROLL FOR NEXT