ಹುಬ್ಬಳ್ಳಿ: ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯದ ಪರ ವಕೀಲ ನಾರಿಮನ್ ರಿಂದಾಗಿ ಸುಪ್ರೀಂ ಕೋರ್ಟ್ ನಲ್ಲಿ ಕರ್ನಾಟಕಕ್ಕೆ ವಿಲನ್ ಪಟ್ಟ ದೊರೆಯಿತು ಎಂದು ವಿಧಾನ ಸಭೆ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಆರೋಪಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಕಾವೇರಿ ವಿಷಯಕ್ಕೆ ಸಂಬಂಧಿಸಿದಂತೆ ಅಧಿವೇಶನದಲ್ಲಿ ತೆಗೆದುಕೊಂಡ ನಿರ್ಧಾರಕ್ಕೆ ನಾವು ಬದ್ಧರಾಗಿದ್ದೇವೆ. ಎಂಥದೇ ಕಠಿಣ ಪರಿಸ್ಥಿತಿ ಬಂದರೂ ಎದುರಿಸಲು ಸಿದ್ಧ. ರಾಜ್ಯದ ಹಿತಾಸಕ್ತಿ ಕಾಪಾಡಲು ಬದ್ಧ ಎಂದು ತಿಳಿಸಿದ್ದಾರೆ.
''ರಾಜ್ಯದ ಪರ ವಕೀಲ ಫಾಲಿ ನಾರಿಮನ್ ವೃತ್ತಿ ಬದ್ಧತೆಗೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ. ಅವರನ್ನು ಬದಲಾವಣೆ ಮಾಡುವುದಾದರೆ ನಮ್ಮ ಬೆಂಬಲವಿದೆ. ಸುಪ್ರೀಂಕೋರ್ಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಬರೆದಿರುವ ಪತರ್ವನ್ನು ಬಹಿರಂಗವಾಗಿ ತೋರಿಸುವ ಮೂಲಕ ರಾಜ್ಯವನ್ನು ವಿಲನ್ ರೀತಿ ಬಿಂಬಿಸಿದ್ದಾರೆ ಎಂದು ದೂರಿದ್ದಾರೆ.
ರಾಜ್ಯ ಸರ್ಕಾರದ ಜೊತೆ ತೀರ್ಮನಿಸದೇ ಹತ್ತು ಸಾವಿರ ಕ್ಯೂಸೆಕ್ ನೀರು ಬಿಡುವುದಾಗಿ ಹೇಳಿದ್ದು ಮೂರ್ಖತನದ ಪರಮಾವಧಿ ಎಂದು ಕಿಡಿಕಾರಿದರು.