ಬೆಂಗಳೂರು: ಸಿಎಂ ಸಿದ್ದರಾಮಯ್ಯನವರೇ ನಿಮ್ಮ ಜೊತೆ ನಾವಿದ್ದೇವೆ ದಯವಿಟ್ಟು ತಮಿಳುನಾಡಿಗೆ ಒಂದು ಹನಿ ನೀರು ಬಿಡಬೇಡಿ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಕಾವೇರಿ ವಿಚಾರದಲ್ಲಿ ಸುಪ್ರೀಂ ಕೋರ್ಟ್‌ನಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನೆಡೆಯಾದ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾವೇರಿ ವಿಷಯದಲ್ಲಿ ಕರ್ನಾಟಕದ ಜನತೆಯನ್ನು ಕೆರಳಿಸುತ್ತಿದ್ದಾರೆ. ರಾಜ್ಯ ಸರ್ಕಾರ ತಮಿಳುನಾಡಿಗೆ ಒಂದು ಹನಿ ನೀರನ್ನು ಬಿಡಬಾರದು. ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿ ಎಂದು ಸೂಚನೆ ನೀಡಿದರು.
ಈಗಾಗಲೇ ಕರ್ನಾಟಕ ನೀರಿನ ಸಂಕಷ್ಟ ಎದುರಿಸುತ್ತಿರುವಾಗ ಇಂದಿನ ವಿಚಾರಣೆಯಲ್ಲಿ ತಮಿಳುನಾಡಿಗೆ ಬಿಡುತ್ತಿರುವ ನೀರಿನ ಪ್ರಮಾಣ ಕಡಿಮೆಯಾಗಬಹುದು ಎನ್ನುವುದು ನಮ್ಮ ನಿರೀಕ್ಷೆಯಾಗಿತ್ತು. ಇದರಿಂದ ಕರ್ನಾಟಕದ ಸಂಕಷ್ಟ ಇನ್ನಷ್ಟು ಹೆಚ್ಚಲಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.