ಮೈಸೂರು: ಪಕ್ಷದ ವಿರುದ್ಧ ಬಂಡಾಯವೆದ್ದಿದ್ದ ಮಾಜಿ ಸಚಿವ ವಿ.ಶ್ರೀನಿವಾಸ ಪ್ರಸಾದ್ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆಂಬ ವದಂತಿ ಹಿನ್ನೆಲೆಯಲ್ಲೇ ಇದೀಗ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರನ್ನು ಭೇಟಿಯಾಗುವಂತೆ ಶ್ರೀನಿವಾಸ ಪ್ರಸಾದ್ ಅವರಿಗೆ ಆಹ್ವಾನ ಬಂದಿದೆ ಎಂದು ಹೇಳಲಾಗುತ್ತಿದೆ.
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಮಾತುಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ದುಡುಕಿನ ನಿರ್ಧಾರ ಕೈಗೊಳ್ಳದಂತೆ ಈಗಾಗಲೇ ಕಾಂಗ್ರೆಸ್ ನ ಕೆಲ ನಾಯಕರು ಶ್ರೀನಿವಾಸ ಪ್ರಸಾದ್ ಅವರ ಮನವೊಲಿಸುವ ಪ್ರಯತ್ನಗಳನ್ನು ಮಾಡುತ್ತಿದ್ದಾರೆಂದು ಹೇಳಲಾಗುತ್ತಿದೆ.
ಈ ಬೆಳವಣಿಗೆ ಹಿನ್ನೆಲೆಯಲ್ಲಿ ಶ್ರೀನಿವಾಸ ಪ್ರಸಾದ್ ಅವರ ಬಳಿ ಮನವಿ ಮಾಡಿಕೊಂಡಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು, ಪಕ್ಷದ ಕುರಿತಂತಿರುವ ಪ್ರತಿಕ್ರಿಯೆಗಳನ್ನು ಸಾರ್ವಜನಿಕವಾಗಿ ನೀಡಬೇಡಿ. ಈ ರೀತಿಯ ಪ್ರತಿಕ್ರಿಯೆಗಳು ಪಕ್ಷದ ವರ್ಚಸ್ಸಿಗೆ ಹಾನಿಯುಂಟು ಮಾಡಲಿದೆ ಎಂದು ಹೇಳಿದ್ದಾರೆನ್ನಲಾಗಿದೆ. ಅಲ್ಲದೆ, ನವದೆಹಲಿಯಲ್ಲಿ ಕಾಂಗ್ರೆಸ್ ಅದ್ಯಕ್ಷೆ ಸೋನಿಯಾ ಗಾಂಧಿಯವರನ್ನು ಭೇಟಿಯಾಗಿ ಮಾತುಕತೆ ನಡೆಸುವಂತೆ ಆಹ್ವಾನ ನೀಡಿದ್ದಾರೆಂದು ತಿಳಿದುಬಂದಿದೆ.
ಇನ್ನು ಬಂಡಾಯವೆದ್ದಿರುವ ಶ್ರೀನಿವಾಸ ಪ್ರಸಾದ್ ಅವರಿಗೆ ಕರೆ ಮಾಡುವ ಮುಖಾಂತರ ಹಲವು ಪಕ್ಷದ ನಾಯಕರು ಸಮಾಧಾನ ಹೇಳಲು ಪ್ರಯತ್ನ ಮಾಡಿದ್ದು, ಹೆಚ್.ಡಿ. ದೇವೇಗೌಡ, ಹೆಚ್.ಡಿ. ಕುಮಾರಸ್ವಾಮಿ, ಬಿ.ಎಸ್.ಯಡಿಯೂರಪ್ಪ ಮತ್ತು ಶೋಭಾ ಕರಂದ್ಲಾಜೆ ಅವರು ಕರೆ ಮಾಡಿ ಮಾತನಾಡಿದ್ದಾರೆಂದು ತಿಳಿದುಬಂದಿದೆ. ಮಾತುಕತೆ ವೇಳೆ ಶ್ರೀನಿವಾಸ್ ಅವರು ತಮಗೆ ಯಾವುದೇ ಪಕ್ಷ ಸೇರುವ ಆಸಕ್ತಿ ಇಲ್ಲ ಎಂದು ಪ್ರತಿಕ್ರಿಯೆ ನೀಡಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ.