ಐಟಿ ದಾಳಿ ರಾಜಕೀಯ ಪ್ರೇರಿತ ಎಂಬುದರ ಬಗ್ಗೆ ಪ್ರತಿಕ್ರಿಯೆ ನೀಡಲ್ಲ: ವಿಚಾರಣೆ ಬಳಿಕ ಡಿಕೆಶಿ
ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ತಮ್ಮ ಹಾಗೂ ತಮ್ಮ ಆಪ್ತರ ಮನೆ ಮತ್ತು ಕಚೇರಿಗಳ ಮೇಲೆ ನಡೆಸಿದ ದಾಳಿಯ ರಾಜಕೀಯ ಪ್ರೇರಿತ....
ಬೆಂಗಳೂರು: ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ತಮ್ಮ ಹಾಗೂ ತಮ್ಮ ಆಪ್ತರ ಮನೆ ಮತ್ತು ಕಚೇರಿಗಳ ಮೇಲೆ ನಡೆಸಿದ ದಾಳಿಯ ರಾಜಕೀಯ ಪ್ರೇರಿತ ಎಂಬುದರ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರು ಸೋಮವಾರ ಹೇಳಿದ್ದಾರೆ.
ಇಂದು ಐಟಿ ಅಧಿಕಾರಿಗಳ ವಿಚಾರಣೆ ಎದುರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶಿವಕುಮಾರ್, ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ಸಮನ್ಸ್ ನೀಡುವ ಮತ್ತು ದಾಳಿ ನಡೆಸುವ ಅಧಿಕಾರ ಇದೆ. ಅವರ ಕೆಲಸ ಅವರು ಮಾಡಿದ್ದಾರೆ ಎಂದರು.
ಇಂದಿನ ವಿಚಾರಣೆ ಬಗ್ಗೆ ನಾನು ಯಾವುದೇ ಪ್ರತಿಕ್ರೆಯೆ ನೀಡುವುದಿಲ್ಲ. ಆದರೆ ಅಧಿಕಾರಿಗಳು ಕೇಳಿದ ಎಲ್ಲಾ ಪ್ರಶ್ನೆಗಳಿಗೂ ಉತ್ತರ ನೀಡಿದ್ದೇನೆ. ಅಧಿಕಾರಿಗಳು ಕೇಳಿದ ಎಲ್ಲಾ ರೀತಿಯ ದಾಖಲಾತಿಗಳನ್ನು ನೀಡುವಂತೆ ನಮ್ಮ ಆಡಿಟರ್ ಗೆ ಹೇಳಿದ್ದೇನೆ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ಸೇರಿದಂತೆ ಕೇಂದ್ರದ ಹಲವು ಕಾಂಗ್ರೆಸ್ ನಾಯಕರು ಶಿವಕುಮಾರ್ ಮೇಲಿನ ಐಟಿ ದಾಳಿ ರಾಜಕೀಯ ಪ್ರೇರಿತ ಎಂದು ಆರೋಪಿಸಿದ್ದರು. ಆದರೆ ಈ ಕುರಿತ ವರದಿಗಾರರ ಪ್ರಶ್ನೆಗೆ ಯಾವುದೇ ಪ್ರತಿಕ್ರಿಯೆ ನೀಡಲು ಶಿವಕುಮಾರ್ ನಿರಾಕರಿಸಿದ್ದಾರೆ.
ಸತತ ಮೂರು ದಿನಗಳ ದಾಳಿಯ ನಂತರ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಇಂದು ಇಂಧನ ಸಚಿವರನ್ನು ಸತತ ನಾಲ್ಕು ಗಂಟೆಗಳ ಕಾಲ ವಿಚಾರಣೆ ನಡೆಸಿದ್ದಾರೆ. ವಿಚಾರಣೆ ಬಳಿಕ ಡಿ ಕೆ ಶಿವಕುಮಾರ್ ಅವರು ತಮ್ಮ ಸಹೋದರ ಹಾಗೂ ಸಂಸದ ಡಿ ಕೆ ಸುರೇಶ್ ಅವರೊಂದಿಗೆ ತೆರಳಿದರು.