ಮಾ.1ರಿಂದ ಕಾಂಗ್ರೆಸ್ ಜನಾಶೀರ್ವಾದ ಯಾತ್ರೆ: ಸಿಎಂ ಸಿದ್ದರಾಮಯ್ಯ
ಬಿಜೆಪಿಯ ಪರಿವರ್ತನಾ ಯಾತ್ರೆ ಹಾಗೂ ಜೆಡಿಎಸ್ ನ ವಿಕಾಸ ಯಾತ್ರೆಗೆ ಪರ್ಯಾಯವಾಗಿ ಕಾಂಗ್ರೆಸ್ ಮಾರ್ಚ್ 1ರಿಂದ...
ಬೆಂಗಳೂರು: ಬಿಜೆಪಿಯ ಪರಿವರ್ತನಾ ಯಾತ್ರೆ ಹಾಗೂ ಜೆಡಿಎಸ್ ನ ವಿಕಾಸ ಯಾತ್ರೆಗೆ ಪರ್ಯಾಯವಾಗಿ ಕಾಂಗ್ರೆಸ್ ಮಾರ್ಚ್ 1ರಿಂದ ಜನಾಶೀರ್ವಾದ ಯಾತ್ರೆ ಆರಂಭಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಹೇಳಿದ್ದಾರೆ.
ಇಂದು ಗೃಹ ಕಚೇರಿ ಕೃಷ್ಣಾದಲ್ಲಿ 1 ಲಕ್ಷ ಬಹುಮಹಡಿ ವಸತಿ ಯೋಜನೆಯಡಿ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಕಾಂಗ್ರೆಸ್ ಪಕ್ಷದಿಂದ ಜನಾಶೀರ್ವಾದ ಯಾತ್ರೆ ನಡೆಯಲಿದ್ದು, ಸರ್ಕಾರದ ವತಿಯಿಂದ ಸಾಧನ ಸಂಭ್ರಮ ಸಮಾವೇಶ ನಡೆಯಲಿದೆ ಎಂದು ಸ್ಪಷ್ಟಪಡಿಸಿದರು.
ಇದೇ ತಿಂಗಳ 13ರಿಂದ ರಾಜ್ಯದ ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿ ಸಾಧನ ಸಂಭ್ರಮ ಸಮಾವೇಶ ನಡೆಯಲಿದ್ದು, ಜಿಲ್ಲಾ ಪ್ರವಾಸ, ಕ್ಷೇತ್ರ ಪ್ರವಾಸ ಪೂರ್ಣಗೊಂಡ ಬಳಿಕ ಪಕ್ಷದ ವತಿಯಿಂದ ಜನಾಶೀರ್ವಾದ ಯಾತ್ರೆ ನಡೆಯಲಿದೆ ಎಂದು ಸಿಎಂ ತಿಳಿಸಿದ್ದಾರೆ.
ಡಿಸೆಂಬರ್ 13ರಿಂದಲೇ ಜನಾರ್ಶೀವಾದ ಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂಬ ವರದಿಗಾರರ ಪ್ರಶ್ನೆಗೆ ಉತ್ತರಿಸಿದ ಸಿಎಂ, ನಾನು ಈಗ ಯಾತ್ರೆ ಮಾಡುತ್ತಿದ್ದೇನೆ ಎಂದು ಯಾರು ಹೇಳಿದ್ದು ನಿಮಗೆ? ಮಾರ್ಚ್ ಒಂದರಿಂದ ಯಾತ್ರೆ ಡುತ್ತೇನೆ. ಸದ್ಯ ಪ್ರತಿ ವಿಧಾನಸಭೆ ಕ್ಷೇತ್ರದಲ್ಲಿ ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಕ್ಕೆ ಹೋಗುತ್ತೇನೆ ಅಷ್ಟೆ ಎಂದರು.