ಕಾಂಗ್ರೆಸ್ ಅಧ್ಯಕ್ಷರಾಗಿ ರಾಹುಲ್ ಆಯ್ಕೆ, ದೇಶದ ರಾಜಕೀಯದ ಮೇಲೆ ದೊಡ್ಡ ಪರಿಣಾಮ: ಸಿಎಂ ಸಿದ್ದರಾಮಯ್ಯ
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಪಕ್ಷವನ್ನು ಮುನ್ನಡೆಸಬೇಕು ಎಂದು ಜನತೆ ಬಯಸಿದ್ದಾರೆ ಮತ್ತು ಅವರು ಅಧ್ಯಕ್ಷರಾಗಿ ಆಯ್ಕೆಯಾಗುವುದರಿಂದ....
ಹುಬ್ಬಳ್ಳಿ: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಪಕ್ಷವನ್ನು ಮುನ್ನಡೆಸಬೇಕು ಎಂದು ಜನತೆ ಬಯಸಿದ್ದಾರೆ ಮತ್ತು ಅವರು ಅಧ್ಯಕ್ಷರಾಗಿ ಆಯ್ಕೆಯಾಗುವುದರಿಂದ ದೇಶದ ರಾಜಕೀಯದ ಮೇಲೆ ದೊಡ್ಡ ಪರಿಣಾಮ ಬೀರುತ್ತೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಹೇಳಿದ್ದಾರೆ.
ಇಂದು ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಅಧ್ಯಕ್ಷರಾದರೆ ಪಕ್ಷದಲ್ಲಿ ದೊಡ್ಡ ಬದಲಾವಣೆ ಸಾಧ್ಯ ಮತ್ತು ಇದಕ್ಕೆ ಬೇರೆ ಪಕ್ಷಗಳ ಮೆಚ್ಚುಗೆ ಬೇಕಾಗಿಲ್ಲ ಎಂದರು ಪರೋಕ್ಷವಾಗಿ ಬಿಜೆಪಿಗೆ ಟಾಂಗ್ ನೀಡಿದರು.
ಕಾಂಗ್ರೆಸ್ ಕುಟುಂಬ ರಾಜಕೀಯ ಮಾಡುತ್ತಿದೆ ಎಂಬ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯಿಸಿದ ಸಿಎಂ, ನೆಹರು ಕುಟುಂಬದ ಹೊರತಾಗಿಯೂ ಹಲವರು 130 ವರ್ಷಗಳ ಇತಿಹಾಸವಿರುವ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿದ್ದಾರೆ ಎಂದರು.
ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಸಾಧಿಸುವುದು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದ ಸಿಎಂ, ಮುಂಬರುವ ಚುನಾವಣೆಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯ ಸಾಮರ್ಥ್ಯ ತಿಳಿಯಲಿದೆ ಎಂದರು.
ಇದೇ ವೇಳೆ ತಮ್ಮನ್ನು 'ಪಾಪದ ಪಿಂಡ' ಎಂದು ಕರೆದ ಕೇಂದ್ರ ಸಚಿವ ಅನಂತಕುಮಾರ ಹೆಗಡೆಯವರು ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ, ಅನಂತಕುಮಾರ ಹೆಗಡೆ ಕೇಂದ್ರ ಸಚಿವರಾಗಲು ನಾಲಾಯಕ್ ಎಂದು ಕಟುವಾಗಿ ಟೀಕಿಸಿದರು. ಅಲ್ಲದೆ ಅನಂತಕುಮಾರ ಹೆಗಡೆ ಕುರಿತಂತೆ ಹೆಚ್ಚು ಮಾತನಾಡುವ ಅವಶ್ಯಕತೆ ನನಗಿಲ್ಲ ಎಂದು ಹೇಳಿದರು.