ಬೆಂಗಳೂರು: ಮಹದಾಯಿ ವಿವಾದ ಇದೀಗ ರಾಜ್ಯ ರಾಜಕಾರಣದಲ್ಲಿ ವ್ಯಾಪಕ ಚಟುವಟಿಕೆಗೆ ಕಾರಣವಾಗಿದ್ದು, ಅತ್ತ ರೈತಪರ ಸಂಘಟನೆಗಳು ಬಿಜೆಪಿ ಕಚೇರಿ ಎದುರು ಪ್ರತಿಭಟನೆ ನಡೆಸುತ್ತಿರುವಂತೆಯೇ ಇತ್ತ ಬಿಜೆಪಿ ರೈತ ಮೋರ್ಚಾ ಕೂಡ ಕಾಂಗ್ರೆಸ್ ಪಕ್ಷದ ಕಚೇರಿ ಎದುರು ಪ್ರತಿಭಟನೆ ನಡೆಸಲು ನಿರ್ಧರಿಸಿದೆ.
ಅತ್ತ ಮಹದಾಯಿಗಾಗಿ ಉತ್ತರ ಕರ್ನಾಟಕ ಬಂದ್ ಚಾಲ್ತಿಯಲ್ಲಿರುವಂತೆಯೇ ಇತ್ತ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳ ಕಚೇರಿಗಳಲ್ಲಿ ವ್ಯಾಪಕ ಬಿರುಸಿನ ರಾಜಕೀಯ ಚಟುವಟಿಕೆಗಳನ್ನು ನಡೆಯುತ್ತಿದ್ದು, ಇಂದು ಬೆಳಗ್ಗೆ ಬಿಜೆಪಿ ಕಚೇರಿಗೆ ಪಕ್ಷದ ಕಿಸಾನ್ ಮೋರ್ಚಾದ ರೈತರು ಆಗಮಿಸಿದ್ದು, ನಾಯಕರೊಂದಿಗೆ ಚರ್ಚೆ ನಡೆಸಿದರು. ಸುಮಾರು ಅರ್ಧಗಂಟೆ ನಡೆದ ಚರ್ಚೆ ಬಳಿಕ ಹೊರ ಬಂದ ರೈತರು ಕಾಂಗ್ರೆಸ್ ಪಕ್ಷದ ಕಚೇರಿ ಎದುರು ತಾವು ಪ್ರತಿಭಟನೆ ನಡೆಸುವುದಾಗಿ ಘೋಷಣೆ ಮಾಡಿದ್ದಾರೆ. ಈ ಬಗ್ಗೆ ಮಾತನಾಡಿದ ರೈತರು ನಾವು ಬಿಜೆಪಿ ಪಕ್ಷದ ಪರವಾಗಿ ಕಾಂಗ್ರೆಸ್ ಪಕ್ಷದ ಕಚೇರಿ ಎದುರು ಪ್ರತಿಭಟನೆ ನಡೆಸುತ್ತೇವೆ ಎಂದು ಹೇಳಿದರು.
ಕಾಂಗ್ರೆಸ್ ಕಚೇರಿ ಸಿಎಂ ಸಿದ್ದ ದೂರವಾಣಿ ಕರೆ
ಏತನ್ಮಧ್ಯೆ ಇಂದು ಬೆಳಗ್ಗೆ ಕಾಂಗ್ರೆಸ್ ಕಚೇರಿಗೆ ಕರೆ ಮಾಡಿದ್ದ ಸಿದ್ದರಾಮಯ್ಯ ಕಾಂಗ್ರೆಸ್ ಮುಖಂಡ ಹಾಗೂ ಬಿಬಿಎಂಪಿ ಆಡಳಿತ ಪಕ್ಷದ ಮುಖಂಡ ರಿಜ್ವಾನ್ ಅವರಿಗೆ ಕರೆ ಮಾಡಿದ್ದಾರೆ. ಈ ವೇಳೆ ಕಾಂಗ್ರೆಸ್ ಕಚೇರಿ ಬಳಿಯ ಚಟುವಟಿಕೆಗಳನ್ನು ಸೂಕ್ಷ್ಮವಾಗಿ ಗಮನಿಸುವಂತೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಅಲ್ಲದೆ ಮಹದಾಯಿ ವಿವಾದ ಸಂಬಂಧ ಪಕ್ಷದ ಯಾವುದೇ ನಾಯಕರು ಬಾಯಿಗೆ ಬಂದಂತೆ ಹೇಳಿಕೆ ನೀಡದಂತೆಯೂ ಸಿಎಂ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ.