ತೀರ್ಥಹಳ್ಳಿಯಲ್ಲಿ ನಡೆದ ಪರಿವರ್ತನಾ ಯಾತ್ರೆಯಲ್ಲಿ ಬಿಜೆಪಿ ನಾಯಕರು
ತೀರ್ಥಹಳ್ಳಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಸಾಧನೆಯಿಂದಾಗಿ ಬಿಜೆಪಿ ಪಕ್ಷ ದೇಶದ 19 ರಾಜ್ಯಗಳಲ್ಲಿ ಆಡಳಿತ ನಡೆಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಶುಕ್ರವಾರ ಹೇಳಿದ್ದಾರೆ.
ತೀರ್ಥಹಳ್ಳಿಯಲ್ಲಿ ಪರಿವರ್ತನಾ ಯಾತ್ರೆಯನ್ನುದ್ದೇಶಿಸಿ ಮಾತನಾಡಿರುವ ಅವರು, ಕಾಂಗ್ರೆಸ್ ಪಕ್ಷದ ಮೇಲೆ ರಾಜ್ಯ ಜನತೆ ನಂಬಿಕೆಯನ್ನು ಕಳೆದುಕೊಂಡಿದ್ದಾರೆ. ಕೇವಲ ರಾಜ್ಯ ಅಷ್ಟೇ ಅಲ್ಲ, ದೇಶದ ಜನತೆಯ ನಂಬಿಕೆಯನ್ನೂ ಕಾಂಗ್ರೆಸ್ ಕಳೆದುಕೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವತಃ ತಾವೇ ಮಾಜಿ ಮುಖ್ಯಮಂತ್ರಿ ದೇವರಾಜ್ ಅರಸು ಅವರಿಗೆ ತಮ್ಮನ್ನು ಹೋಲಿಕೆ ಮಾಡಿಕೊಳ್ಳುತ್ತಿದ್ದಾರೆ. ಇದು ಸರಿಯಲ್ಲ. ಅರಸು ಅವರು ಭೂ ಸುಧಾರಣಾ ಕಾಯಿದೆಯನ್ನು ಜಾರಿಗೆ ತರುವ ಮೂಲಕ ಸಮಾಜದಲ್ಲಿ ತುಳಿತಕ್ಕೊಳಗಾದ ವರ್ಗಗಳ ಜೀವನವನ್ನು ಬದಲಾಯಿಸಿದ್ದರು. ಆದರೆ, ಸಿದ್ದರಾಮಯ್ಯ ಅವರು ಶ್ರೀಮಂತರಿಗೆ ಹಾಗೂ ಗಣಿಗಾರಿಗಕೆಗೆ ಬೆಂಬಲವನ್ನು ನೀಡುತ್ತಿದ್ದಾರೆಂದು ಹೇಳಿದ್ದಾರೆ.
ಹಣದ ಮೂಲಕ ಕಾಂಗ್ರೆಸ್ ಚುನಾವಣೆಗಳನ್ನು ಗೆಲ್ಲುತ್ತಿದೆ. ಎರಡನೇ ಬಾರಿಯೂ ಮತ್ತೆ ಮುಖ್ಯಮಂತ್ರಿಯಾಗಿರುವ ಭ್ರಮೆಯಲ್ಲಿ ಸಿದ್ದರಾಮಯ್ಯ ಅವರು ಇದ್ದಾರೆ. ಮತ್ತೆ ಅಧಿಕಾರಕ್ಕೆ ಬರುವ ಸಲುವಾಗಿ ಸಿದ್ದರಾಮಯ್ಯ ಅವರು ಜಾತಿ ಹಾಗೂ ಸಮುದಾಯಗಳನ್ನು ಒಡೆಯಲು ಪ್ರಯತ್ನಿಸುತ್ತಿದ್ದಾರೆ. ಅಚ್ಛೇದಿನ್ ಯಾವಾಗ ಬರುತ್ತದೆ ಎಂದು ಸಿದ್ದರಾಮಯ್ಯ ಅವರು ಕೇಳುತ್ತಿರುತ್ತಾರೆ. ಸಿದ್ದರಾಮಯ್ಯ ಅವರು ಯಾವಾಗ ತಮ್ಮ ಅಧಿಕಾರವನ್ನು ಕಳೆದುಕೊಳ್ಳುತ್ತಾರೋ, ಅಂದು ರಾಜ್ಯಕ್ಕೆ ಅಚ್ಛೇದಿನ್ ಬರುತ್ತದೆ ಎಂದು ತಿಳಿಸಿದ್ದಾರೆ.
ತ್ರಿವಳಿ ತಲಾಖ್ ಮಸೂದೆ ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಅಂಗೀಕಾರಗೊಂಡಿದೆ. ಪ್ರಧಾನಮಂತ್ರಿಗಳ ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ದೇಶದಲ್ಲಿ ಉತ್ತಮ ಫಲಿತಾಂಶವನ್ನು ನೀಡುತ್ತಿದೆ. ಜನತೆ ಬಿಜೆಪಿಗೆ ಮತವನ್ನು ಹಾಕಬೇಕು. ದೇಶದಲ್ಲಿಯೇ ರಾಜ್ಯ ಮಾದರಿ ರಾಜ್ಯವಾಗುವಂತೆ ಮಾಡಬೇಕು ಎಂದಿದ್ದಾರೆ.
ಯಾತ್ರೆಯಲ್ಲಿ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ, ಎಂಎಲ್'ಸಿ ಸಿ.ಟಿ. ರವಿ. ಸಂಸದೆ ಶೋಭಾ ಕರಂದ್ಲಾಜೆಯವರು ಭಾಗಿಯಾಗಿದ್ದರು.