ಶ್ರೀನಿವಾಸಪುರದಲ್ಲಿ ನಿನ್ನೆ ಸಾಧನಾ ಸಮಾವೇಶ ಉದ್ಘಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಶ್ರೀನಿವಾಸಪುರ/ಮುಳಬಾಗಿಲು/ ಬಂಗಾರಪೇಟೆ: ಬಿಜೆಪಿ ನಾಯಕರಾದ ಬಿ.ಎಸ್.ಯಡಿಯೂರಪ್ಪ, ಕೆ.ಎಸ್.ಈಶ್ವರಪ್ಪ, ಜಗದೀಶ್ ಶೆಟ್ಟರ್ ಮತ್ತು ಶೋಭಾ ಕರಂದ್ಲಾಜೆಯವರು ಮೊದಲು ತಾವು ಪರಿವರ್ತನೆಯಾಗಬೇಕು. ನಂತರ ಅವರು ಪರಿವರ್ತನಾ ಯಾತ್ರೆ ನಡೆಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ನಿನ್ನೆ ಶ್ರೀನಿವಾಸಪುರ, ಮುಳಬಾಗಿಲು ಮತ್ತು ಬಂಗಾರಪೇಟೆಗಳಲ್ಲಿ ಸಾಧನಾ ಸಮಾವೇಶ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಬಿಜೆಪಿಯವರ ಪರಿವರ್ತನಾ ಯಾತ್ರೆಗೆ ಜನರು ಉತ್ತಮವಾಗಿ ಪ್ರತಿಕ್ರಿಯಿಸುತ್ತಿಲ್ಲ ಎಂದರು.
ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಬಂದು ಇಲ್ಲಿ ಪ್ರಚಾರ ನಡೆಸಿದರೂ ಕೂಡ ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದಿಲ್ಲ. ಜನರು ಕಾಂಗ್ರೆಸ್ ಗೆ ಆಶೀರ್ವಾದ ಮಾಡಲು ನಿರ್ಧರಿಸಿದ್ದಾರೆ.ಕಾಂಗ್ರೆಸ್ ಸರ್ಕಾರ ಹಲವು ಅಭಿವೃದ್ಧಿ ಕಾರ್ಯಗಳನ್ನು ಕಳೆದ ನಾಲ್ಕೂವರೆ ವರ್ಷಗಳಲ್ಲಿ ನಡೆಸಿದ್ದು, ಜನರ ಜೀವನಮಟ್ಟ ಸುಧಾರಣೆಯಾಗಿದೆ ಎಂದು ಮುಖ್ಯಮಂತ್ರಿ ಪ್ರತಿಪಾದಿಸಿದರು.
2013ರ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳನ್ನೆಲ್ಲಾ ಕಾಂಗ್ರೆಸ್ ಪಕ್ಷ ಈಡೇರಿಸಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.
ಬಿಜೆಪಿ ಮತ್ತು ಜೆಡಿಎಸ್ ಗೆ ಜನತೆ ಮುಂದೆ ಸಾಧನೆ ತೋರಿಸಿಕೊಳ್ಳಲು ಯಾವುದೇ ಕಾರಣಗಳಿಲ್ಲ ಎಂದರು.
ಇಂಧನ ಸಚಿವ ಡಿ.ಕೆ.ಶಿವಕುಮಾರ್ ಮಾತನಾಡಿ, ಸೀರೆಗಳನ್ನು ಮತ್ತು ಸೈಕಲ್ ವಿತರಿಸಿದ್ದು ಮಾತ್ರ ಹಿಂದಿನ ಬಿಜೆಪಿ ಸರ್ಕಾರದ ಸಾಧನೆಯಷ್ಟೆ ಎಂದು ಲೇವಡಿ ಮಾಡಿದರು.
ಬಿಜೆಪಿ ಅಧಿಕಾರದಲ್ಲಿದ್ದಾಗ ಹಲವು ನಾಯಕರು ಜೈಲಿಗೆ ಹೋದರು. ಆದರೆ ಕಾಂಗ್ರೆಸ್ ಸರ್ಕಾರ ಜನರ ಉದ್ಧಾರಕ್ಕೆ ಕೆಲಸ ಮಾಡುತ್ತಿದೆ. ಎತ್ತಿನಹೊಳೆ ಯೋಜನೆ ಬಗ್ಗೆ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿಯವರ ಭಾಷಣ ಸರಿಯಾಗಿಲ್ಲ ಮತ್ತು ಅಭಿವೃದ್ಧಿ ಕಾರ್ಯಗಳಲ್ಲಿ ಅವರು ರಾಜಕೀಯ ಮಾಡಬಾರದು. ಜನರಿಗೆ ನೀರು ಒದಗಿಸಲು ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ ಎಂದರು.
ಎತ್ತಿನಹೊಳೆ ಮತ್ತು ಕೆಸಿ ಕಣಿವೆ ಯೋಜನೆಗಳನ್ನು ಕಾಂಗ್ರೆಸ್ ಸರ್ಕಾರ ಕೈಗೆತ್ತಿಕೊಂಡಿದ್ದು, ಇದರಿಂದ ಕೋಲಾರ, ಚಿಕ್ಕಬಳ್ಳಾಪುರ ಜನತೆಯ ನೀರಿನ ಬವಣೆಯನ್ನು ತಪ್ಪಿಸಬಹುದು. ಆದರೆ ವಿರೋಧ ಪಕ್ಷಗಳು ಈ ವಿಷಯವನ್ನು ಬೇರೆಡೆಗೆ ಬದಲಾಯಿಸಲು ಯತ್ನಿಸುತ್ತಿವೆ. ಜನರಿಗೆ ಇದರ ಬಗ್ಗೆ ಚೆನ್ನಾಗಿ ತಿಳಿದಿದೆ ಎಂದು ಕೋಲಾರ ಸಂಸದ ಮತ್ತು ಮಾಜಿ ಕೇಂದ್ರ ಸಚಿವ ಕೆ.ಎಚ್. ಮುನಿಯಪ್ಪ ಹೇಳಿದರು.