ಬಾಗಲಕೋಟೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಜ್ಯ ಕಾಂಗ್ರೆಸ್ ನಾಯಕರ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಹೊಸ ಬಾಂಬ್ ಸಿಡಿಸಿದ್ದಾರೆ.
ಬಾಗಲಕೋಟೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮುಖ್ಯಂಮಂತ್ರಿ ಸಿದ್ದರಾಮಯ್ಯ ಅವರು ಕುರ್ಚಿ ಉಳಿಸಿಕೊಳ್ಳಲು ಅವರ ಆಪ್ತರೂ ಆಗಿರುವ ವಿಧಾನ ಪರಿಷತ್ ಸದಸ್ಯ ಗೋವಿಂದರಾಜು ಅವರ ಮೂಲಕ ಕಾಂಗ್ರೆಸ್‌ನ ದೆಹಲಿಯ ಕೆಲವು ನಾಯಕರಿಗೆ ರು 1 ಸಾವಿರ ಕೋಟಿ ಸಂದಾಯ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಕೊಪ್ಪಳ ಜಿಲ್ಲೆಯ ಕುಷ್ಟಗಿ ವಿಭಾಗದಲ್ಲಿ ಸಣ್ಣ ನೀರಾವರಿ ಇಲಾಖೆ ಕಾಮಗಾರಿ ಮಾಡದೇ 43 ಕೋಟಿ ಹಣ ಗುಳುಂ ಮಾಡಿದ್ದಾರೆ. ಆರೋಪ ಸಾಬೀತಾದ್ರೂ ಸಿಎಂ ಹಣ ವಸೂಲಿ ಮಾಡಲಾರದೇ ಕಣ್ಮುಚ್ಚಿ ಕುಳಿತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಜಾರಿ ನಿರ್ದೇಶನಾಲಯ ವಶಪಡಿಸಿಕೊಂಡಿರುವ ಡೈರಿಯಲ್ಲಿನ ಮಾಹಿತಿ ಆಧರಿಸಿ ಗೋವಿಂದರಾಜು ಅವರನ್ನು ಇಡಿ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ಹೇಳಿರುವ ಅವರು ಈ ಸಂಬಂಧ ದಾಖಲೆ ಕೂಡ ಬಿಡುಗಡೆ ಮಾಡಲು ಸಿದ್ಧ ಎಂದು ಹೇಳಿದ್ದಾರೆ.