ಬೆಂಗಳೂರು: ಮುಂದಿನ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೇ 24 ಗಂಟೆಗಳಲ್ಲಿ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಆದೇಶಿಸಿ ಜೈಲಿಗೆ ಕಳುಹಿಸುವುದಾಗಿ ನೀಡುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಗುಡುಗಿದ್ದಾರೆ.
ನಗರದ ಟೌನ್ ಹಾಲ್ ಬಳಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಯಡಿಯೂರಪ್ಪ, ಸಿದ್ದರಾಮಯ್ಯ ಅವರ ಗೊಡ್ಡು ಬೆದರಿಕೆಗೆ ಹೆದರಲ್ಲ. ಬಿಜೆಪಿ ಅಧಿಕಾರಕ್ಕೆ ಬಂದ 24ಗಂಟೆಗಳಲ್ಲಿ ಸಿದ್ದರಾಮಯ್ಯ ಹಾಗೂ ಕುಟುಂಬ ವರ್ಗಗಳ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸಲು ಆದೇಶ ನೀಡುತ್ತೇನೆ. ಅಷ್ಟೇ ಅಲ್ಲ ಬಿಜೆಪಿ ಅಧಿಕಾರಕ್ಕೆ ಬಂದ್ರೆ ಸಿದ್ದರಾಮಯ್ಯರನ್ನು ಜೈಲಿಗೆ ಕಳುಹಿಸುತ್ತೇನೆ ಎಂದು ಸವಾಲು ಹಾಕಿದರು.
ಇನ್ನು ಯಡಿಯೂರಪ್ಪ ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ಬಹುಶಃ ದೇಶದಲ್ಲಿ ಯಾರಾದರೂ ಮಹಾನ್ ಭ್ರಷ್ಟರಿದ್ದರೇ ಅದು ಯಡಿಯೂರಪ್ಪ ಮಾತ್ರ. ಬಿ.ಎಸ್ ಯಡಿಯೂರಪ್ಪನೇ ಮಹಾನ್ ಭ್ರಷ್ಟ, ಹಾಗಾಗಿಯೇ ಅವರು 20 ಕೇಸುಗಳನ್ನು ಎದುರಿಸುತ್ತಿದ್ದಾರೆ, ಅವರಿಗೆ ಬೇರೆಯವರ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ವಾಗ್ದಾಳಿ ನಡೆಸಿರುವ ಸಿದ್ದರಾಮಯ್ಯ ಬಿಜೆಪಿ ಅಧಿಕಾರಕ್ಕೆ ಬಂದರೆ ತಾನೆ ಎಂದು ಲೇವಡಿ ಮಾಡಿದ್ದಾರೆ.
ಕಾಂಗ್ರೆಸ್ ಹೈ ಕಮಾಂಡ್ ಗೆ 1 ಸಾವಿರ ಕೋಟಿ ಕಿಕ್ ಬ್ಯಾಕ್ ಹಾಗೂ ರಾಜ್ಯ ಸರ್ಕಾರದ ವೈಫಲ್ಯತೆಗಳನ್ನು ವಿರೋಧಿಸಿ ಬಿಜೆಪಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲು ಇಂದು ಪ್ರತಿಭಟನೆ ಹಮ್ಮಿಕೊಂಡಿತ್ತು.