ರಾಜಕೀಯ

ರಾಯಣ್ಣ ಬ್ರಿಗೇಡ್ ಜಟಾಪಟಿ: ಬಿಜೆಪಿ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಸ್ಥಾನದಿಂದ ಅವ್ವಣ್ಣ ಮ್ಯಾಕೇರಿ ವಜಾ

Lingaraj Badiger
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಮತ್ತು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆಎಸ್ ಈಶ್ವರಪ್ಪ ನಡುವಿನ ಜಟಾಪಟಿ ಮತ್ತಷ್ಟು ತೀವ್ರಗೊಂಡಿದ್ದು, ರಾಯಣ್ಣ ಬ್ರಿಗೇಡ್‌ ಚಟುವಟಿಕೆಯಲ್ಲಿ ಸಕ್ರಿಯರಾಗಿದ್ದ ಅವ್ವಣ್ಣ ಮ್ಯಾಕೇರಿ ಅವರನ್ನು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಉಪಾಧ್ಯಕ್ಷ ಸ್ಥಾನದಿಂದ ವಜಾಗೊಳಿಸಲಾಗಿದೆ.
ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ರಾಜ್ಯ ಬಿಜೆಪಿ ಹಿಂದುಳಿದ ವರ್ಗದ ಅಧ್ಯಕ್ಷ ಬಿ.ಜೆ.ಪುಟ್ಟಸ್ವಾಮಿ ಅವರು ಅವಣ್ಣ ಮ್ಯಾಕೇರಿ ಅವರನ್ನು ವಜಾಗೊಳಿಸಿ ಗುರುವಾರ ಸಂಜೆ ಆದೇಶ ಹೊರಡಿಸಿದ್ದಾರೆ
ಎರಡು ದಿನಗಳ ಹಿಂದಷ್ಟೇ ಈಶ್ವರಪ್ಪ ಜೊತೆ ಗುರುತಿಸಿಕೊಂಡಿದ್ದ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ನ ಪ್ರಧಾನ ಕಾರ್ಯದರ್ಶಿ ಹಾಗೂ ಬಿಬಿಎಂಪಿ ಮಾಜಿ ಮೇಯರ್ ಡಿ.ವೆಂಕಟೇಶ್ ಮೂರ್ತಿ ಅವರನ್ನು ಮಂಗಳವಾರ ಬಿಜೆಪಿಯಿಂದ ಅಮಾನತುಗೊಳಿಸಲಾಗಿತ್ತು. ಗುರುವಾರ ನಡೆದ ದಿಢೀರ್‌ ಬೆಳವಣಿಗೆಯಲ್ಲಿ ಅವ್ವಣ್ಣ ಮ್ಯಾಕೇರಿ ಅವರನ್ನು ವಜಾಗೊಳಿಸಲಾಗಿದೆ. ಈ ಮೂಲಕ ಈಶ್ವರಪ್ಪ ಜತೆಗೆ ಗುರುತಿಸಿಕೊಂಡಿರುವವರ ವಿರುದ್ಧ ಕ್ರಮ ಕೈಗೊಳ್ಳುವ ಮೂಲಕ ಎಚ್ಚರಿಕೆಯ ಸಂದೇಶ ರವಾನಿಸುವುದು ಯಡಿಯೂರಪ್ಪ ಉದ್ದೇಶ ಎನ್ನಲಾಗಿದೆ.
ಈ ಮಧ್ಯೆ ನಿನ್ನೆ ಕೆ.ಎಸ್. ಈಶ್ವರಪ್ಪ ಅವರನ್ನು ಹೊರಗಿಟ್ಟು ಪರಿಷತ್ತಿನ ಸದಸ್ಯರ ಸಭೆ ನಡೆಸಿದ ಯಡಿಯೂರಪ್ಪ ಅವರು, ರಾಯಣ್ಣ  ಬ್ರಿಗೇಡ್‌ ಸಂಘಟನೆಯಲ್ಲಿ ಪಾಲ್ಗೊಂಡರೆ ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎಂಬ ಎಚ್ಚರಿಕೆಯನ್ನು ಕಾರ್ಯಗತಗೊಳಿಸಲು ಮುಂದಾಗಿದ್ದಾರೆ ಎಂಬ ಮಾತುಗಳು ಬಿಜೆಪಿ ವಲಯದಲ್ಲಿ ಕೇಳಿಬರುತ್ತಿವೆ.
SCROLL FOR NEXT