ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಚನ್ನಪಟ್ಟಣ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ .ಡಿ ಕುಮಾರಸ್ವಾಮಿ ಪತ್ನಿ ಅನಿತಾ ಕುಮಾರಸ್ವಾಮಿ ಹೇಳಿದ್ದಾರೆ.
ಚನ್ನಪಟ್ಟಣದಲ್ಲಿ ಆಯೋಜಿಸಿದ್ದ ಜೆಡಿಎಸ್ ಅಲ್ಪಸಂಖ್ಯಾಂತರ ಘಟಕದ ಪದಾಧಿಕಾರಿಗಳ ನೇಮಕ ಮತ್ತು ಕಾಂಗ್ರೆಸ್ ಮುಖಂಡರು, ಯುವಕರ ಜೆಡಿಎಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಚನ್ನಪಟ್ಟಣದಿಂದ ಸ್ಪರ್ಧಿಸುವಂತೆ ಇಲ್ಲಿನ ಮುಖಂಡರು ಹಾಗೂ ಕಾರ್ಯಕರ್ತರು ತಮ್ಮ ಮೇಲೆ ಒತ್ತಡ ಹಾಕುತ್ತಿದ್ದಾರೆ. ಅವರ ಆಶಯದಂತೆ ಇಲ್ಲಿ ಸ್ಪರ್ಧಿಸಿ ಅಭಿವೃದ್ಧಿಗೆ ಶ್ರಮಿಸುವ ತೀರ್ಮಾನ ಮಾಡಿದ್ದೇನೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಜೆಡಿಎಸ್ ಅಧಿಕಾರ ಹಿಡಿಯುವುದು ಖಚಿತ. ಎಚ್.ಡಿ.ಕುಮಾರಸ್ವಾಮಿ ಮತ್ತೊಮ್ಮೆ ಮುಖ್ಯಮಂತ್ರಿಗಳಾಗಿ ರಾಜ್ಯದ ಅಭಿವೃದ್ಧಿಗೆ ಶ್ರಮಿಸಲು ಪಣತೊಟ್ಟಿದ್ದಾರೆ. ಇದಕ್ಕೆ ಎಲ್ಲರ ಸಹಕಾರ ಅಗತ್ಯ ಎಂದರು. ಇನ್ನು ಚನ್ನಪಟ್ಟಣದಲ್ಲಿ ವಾಸ್ತವ್ಯ ಹೂಡಲು ಅನಿತಾ ಕುಮಾರ ಸ್ವಾಮಿ ನಿರ್ಧರಿಸಿದ್ದು, ಜೆಡಿಎಸ್ ಮುಖಂಡರು ಅವರಿಗಾಗಿ ಸೂಕ್ತ ಮನೆಯ ಹುಡುಕಾಟದಲ್ಲಿ ತೊಡಗಿದ್ದಾರೆ ಎನ್ನಲಾಗಿದೆ.