ಬೆಂಗಳೂರು: ಸಚಿವ ಸಂಪುಟ ಪುನಾರಚನೆ ಮಾಡುವುದಿಲ್ಲ ಕೇವಲ ಸಂಪುಟ ವಿಸ್ತರಣೆ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಸ್ಪಷ್ಟಪಡಿಸಿದ್ದಾರೆ.
ಇಂದು ವಿಧಾನ ಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಶೀಘ್ರ ಪಕ್ಷದ ಹೈಕಮಾಂಡ್ ಭೇಟಿ ಮಾಡಿ ಸಂಪುಟ ವಿಸ್ತರಣೆ ಕುರಿತು ಚರ್ಚಿಸುವುದಾಗಿ ತಿಳಿಸಿದ್ದಾರೆ.
ಹೈಕಮಾಂಡ್ ನಾಯಕರ ಭೇಟಿಗಾಗಿ ಸಮಯ ಕೇಳಿದ್ದೇನೆ. ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ಭೇಟಿ ಬಳಿಕ ಸಂಪುಟ ವಿಸ್ತರಣೆ ಮಾಡುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಸದ್ಯ ಗೃಹ, ಅಬಕಾರಿ ಖಾತೆಗಳು ಸೇರಿದಂದೆ ಮೂರು ಖಾತೆಗಳು ಖಾಲಿ ಉಳಿದಿದ್ದು, ಆಕಾಂಕ್ಷಿಗಳು ಸಂಪುಟ ಸೇರಲು ತೀವ್ರ ಪೈಪೋಟಿ ನಡೆಸುತ್ತಿದ್ದಾರೆ. ಗೃಹ ಖಾತೆಯನ್ನು ಹಿರಿಯ ಸಚಿವ ರಾಮಲಿಂಗಾ ರೆಡ್ಡಿ ಅವರಿಗೆ ವಹಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ.