ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರ್ಮಾಣವಾಗಿರುವ ಪ್ರಕ್ಷುಬ್ದ ವಾತಾವರಣಕ್ಕೆ ರಾಜ್ಯ ಸರ್ಕಾರವೇ ನೇರ ಹೊಣೆಯಾಗಿದೆ. ಎಲ್ಲದಕ್ಕೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಕಾರಣರಾಗಿದ್ದು, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಸಾಧ್ಯವಾಗದಿದ್ದಲ್ಲಿ ಅವರು ರಾಜೀನಾಮೆಯನ್ನು ನೀಡಲಿ ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಅವರು ಆಗ್ರಹಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಜಿಲ್ಲಾ ಉಸ್ತುವಾರಿ ಸಚಿವರು ಸೇರಿದಂತೆ ಇನ್ನಿತರ ಸಚಿವರು ಹಿಂಸಾಚಾರ ತಡೆಗಟ್ಟಲು ಕ್ರಮ ಕೈಗೊಳ್ಳುವ ಬದಲಾಗಿ ಬಿಜೆಪಿ ಹಾಗೂ ಸಂಘ ಪರಿವಾರದ ವಿರುದ್ಧವೇ ಆರೋಪಗಳನ್ನು ಮಾಡುತ್ತಿದ್ದಾರೆ. ತಮ್ಮ ವೈಫಲ್ಯಗಳನ್ನು ಮುಚ್ಚಿಹಾಕರು ಮಾಡುತ್ತಿರುವ ಈ ಪ್ರಯತ್ನಗಳನ್ನು ಸಿದ್ದರಾಮಯ್ಯ ಅವರು ಮೊದಲು ನಿಲ್ಲಿಸಬೇಕಿದೆ ಎಂದು ಹೇಳಿದ್ದಾರೆ.
ಮುಖ್ಯಮಂತ್ರಿಗಳು 2 ದಿನಗಳ ಹಿಂದೆ ಮಂಗಳೂರಿಗೆ ಭೇಟಿ ನೀಡಿದರೂ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕನಿಷ್ಠ ಅಧಿಕಾರಿಗಳ ಸಭೆಯನ್ನೂ ನಡೆಸಲಿಲ್ಲ. ಅಲ್ಲಿನ ಪರಿಸ್ಥಿತಿ ಅವಲೋಕಿಸಿ ಜಿಲ್ಲಾ ಪೊಲೀಸ್ ಮತ್ತು ಜಿಲ್ಲಾಡಳಿತಕ್ಕೆ ಸೂಕ್ತ ನಿರ್ದೇಶನ ನೀಡುವ ತಾಳ್ಮೆಯನ್ನು ಅವರು ಪ್ರದರ್ಶಿಸಲಿಲ್ಲ. ಗೃಹ ಖಾತೆ ಹೊಂದಿರುವ ಮುಖ್ಯಮಂತ್ರಿಗಳೇ ಹಿಂಸಾಚಾರ ನಿಯಂತ್ರಿಸಲು ವಿಫಲರಾಗಿದ್ದಾರೆ. ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಸಾಧ್ಯವಾಗದಿದ್ದರೆ, ಸಿದ್ದರಾಮಯ್ಯ ಅವರು ಸುಮ್ಮನಿರಲಿ. ಕೇಂದ್ರ ಸರ್ಕಾರಕ್ಕೆ ಅವಕಾಶ ನೀಡಲಿ, ಅಲ್ಲಿನ ಪರಿಸ್ಥಿತಿಯನ್ನು 24 ಗಂಟೆಗೊಳಗಾಗಿ ನಿಯಂತ್ರಣಕ್ಕೆ ತರುತ್ತೇವೆಂದು ತಿಳಿಸಿದ್ದಾರೆ.
ಸದಾನಂದ ಗೌಡ ಅವರ ಈ ಹೇಳಿಕೆಗೆ ತಿರುಗೇಟು ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬಿಜೆಪಿಯವರು ಸುಮ್ಮನಿದ್ದರೆ ಕರಾವಳಿ ಪ್ರದೇಶದಲ್ಲಿ ಶಾಂತಿ ಸ್ಥಾಪನೆಗೊಳ್ಳುತ್ತದೆ. ಕೆಲ ಬಿಜೆಪಿಯವರು ಮಂಗಳೂರಿನಲ್ಲಿ ಕೋಮು ಗಲಭೆ ಸೃಷ್ಟಿಸಲು ಪ್ರಯತ್ನ ನಡೆಸುತ್ತಿದ್ದಾರೆ. ಬಿಜೆಪಿ ಮುಖಂಡರು ಮೌನ ವಹಿಸಿದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಗಲಭೆ ಶಾಂತವಾಗಲಿದೆ ಎಂದು ಹೇಳಿದ್ದಾರೆ.
ಬಿಜೆಪಿ ಪಕ್ಷದ ಕೆಲ ನಾಯಕರು ಮಂಗಳೂರಿನಲ್ಲಿ ಮತೀಯ ಗಲಭೆ ಸೃಷ್ಟಿಸಲು ಯತ್ನಿಸುತ್ತಿದ್ದಾರೆ. ಮೊದಲು ಬಿಜೆಪಿ ನಾಯಕರು ತಟಸ್ಥವಾಗಿರಬೇಕು. ಆಗ ಎಲ್ಲವೂ ಸರಿ ಹೋಗುತ್ತದ. ಸುಮ್ಮನೆ ಆರೋಪ ಮಾಡುತ್ತಾ ಕೋಮು ಗಲಭೆಗೆ ಪ್ರೇರೇಪಿಸುವುದನ್ನು ಸಹಿಸಲು ಸಾಧ್ಯವಿಲ್ಲ.
ಬಂಟ್ವಾಳ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದೂಪ ಸಂಘಟನೆಗಳು, ಎಸ್ ಡಿಪಿಐ, ಪಿಎಫ್ಐ ಸೇರಿದಂತೆ ವಿವಿಧ ಸಂಘಟನೆಗಳು ಶಾಂತಿ ಕಾಪಾಡಲು ಮುಂದಾಗಬೇಕು. ಅದನ್ನು ಬಿಟ್ಟು ಕೋಮು ಗಲಭೆ ಸೃಷ್ಟಿಸಲು ಮುಂದಾಗುವ ಯಾವುದೇ ಸಂಘಟನೆ ಇರಲಿ, ಅವುಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಮತೀಯವಾದ ಪೋಷಿಸುವ ಸಂಘಠೆಗಳನ್ನು ಮಟ್ಟಹಾಕಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos