ಬಹುಶಃ 2018ರ ವಿಧಾನಸಭಾ ಚುನಾವಣೆಯೇ ನನ್ನ ಕೊನೇ ಚುನಾವಣೆ: ಸಿಎಂ ಸಿದ್ದರಾಮಯ್ಯ
2018ರ ವಿಧಾನಸಭಾ ಚುನಾವಣೆಯೇ ಬಹುಶಃ ನನ್ನ ಕೊನೆಯ ಚುನಾವಣೆಯಾಗಬಹುದು ಎಂದು ಸಿಎಂ ಸಿದ್ದರಾಮಯ್ಯ ಶನಿವಾರ ಹೇಳಿದ್ದಾರೆ.
ಮೈಸೂರು: 2018ರ ವಿಧಾನಸಭಾ ಚುನಾವಣೆಯೇ ಬಹುಶಃ ನನ್ನ ಕೊನೆಯ ಚುನಾವಣೆಯಾಗಬಹುದು ಎಂದು ಸಿಎಂ ಸಿದ್ದರಾಮಯ್ಯ ಶನಿವಾರ ಹೇಳಿದ್ದಾರೆ.
ಶನಿವಾರ ಮೈಸೂರಿನಲ್ಲಿ ಮಾತನಾಡಿದ ಅವರು, ಚಾಮುಂಡೇಶ್ವರಿ ಕ್ಷೇತ್ರ ನನಗೆ ರಾಜಕೀಯ ಮರುಜನ್ಮ ನೀಡಿದ ಕ್ಷೇತ್ರ. ಇದು ನನ್ನ ಕೊನೆಯ ಚುನಾವಣೆ ಕೂಡ ಆಗಬಹುದು. ಹೀಗಾಗಿ ಈ ಬಾರಿ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸಬೇಕೆಂಬ ಒತ್ತಡ ಇದೆ. ಅದೇ ರೀತಿ ವರುಣಾ ಕ್ಷೇತ್ರದಿಂದ ಸ್ಪರ್ಧಿಸಬೇಕೆಂಬ ಒತ್ತಡ ಕೂಡ ಇದೆ. ಆದರೆ, ಈ ಬಗ್ಗೆ ಅಂತಿಮ ತೀರ್ಮಾನ ಕೈಗೊಂಡಿಲ್ಲ. ಯತೀಂದ್ರ ಸ್ಪರ್ಧೆ ಕುರಿತು ಹೈ ಕಮಾಂಡ್ ತೀರ್ಮಾನ ಕೈಗೊಳ್ಳುತ್ತದೆ ಎಂದು ಹೇಳಿದರು.
ಒಂದೇ ದಿನದಲ್ಲಿ ಹೇಳಿಕೆಯಿಂದ ಯೂಟರ್ನ್
ಇನ್ನು ಶುಕ್ರವಾರವಷ್ಟೇ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದ ಸಿಎಂ ಸಿದ್ದರಾಮಯ್ಯಅವರು ತಾನು ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಹಾಗೂ ಪುತ್ರ ಡಾ. ಯತೀಂದ್ರ ವರುಣಾ ಕ್ಷೇತ್ರದಲ್ಲಿ ಸ್ಪರ್ಧಿಸುವ ಸ್ಪಷ್ಟ ಸುಳಿವು ನೀಡಿದ್ದರು. ಆದರೆ ಮಾರನೆಯ ದಿನವೇ ತನ್ನ ಹೇಳಿಕೆ ತದ್ವಿರುದ್ಧ ಹೇಳಿಕೆ ನೀಡಿರುವ ಸಿಎಂ ಸಿದ್ದರಾಮಯ್ಯ ಅವರು, ಚಾಮುಂಡೇಶ್ವರಿ ಕ್ಷೇತ್ರ ನನಗೆ ರಾಜಕೀಯ ಮರುಜನ್ಮ ನೀಡಿದ ಕ್ಷೇತ್ರವಾಗಿದ್ದು, ಮುಂದಿನ ಚುನಾವಣೆಯಲ್ಲಿ ಇಲ್ಲಿಂದಲೇ ಸ್ಪರ್ಧಿಸಬೇಕು ಎಂಬ ಒತ್ತಡವಿದೆ. ಅಂತೆಯೇ ವರುಣಾದಿಂದಲೂ ಸ್ಪರ್ಧಿಸುವಂತೆ ಕಾರ್ಯಕರ್ತ ಒತ್ತಡ ಹಾಕುತ್ತಿದ್ದಾರೆ. ಆದರೆ ಕ್ಷೇತ್ರಗಳ ಆಯ್ಕೆ ವಿಚಾರ ಮಾತ್ರ ಹೈಕಮಾಂಡ್ ಬಿಟ್ಟಿದ್ದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಇನ್ನು ಮೈಸೂರು ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಎರಡನೇ ದಿನವೂ ಚಾಮುಂಡೇಶ್ವರಿ ಕ್ಷೇತ್ರದತ್ತ ಕೇಂದ್ರೀಕೃತವಾಗಿತ್ತು. ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳಿಗೆ ಮುಖ್ಯಮಂತ್ರಿ ಚಾಲನೆ ನೀಡಿದರು.