ಬಳ್ಳಾರಿ: ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ 2018 ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಬಿಜೆಪಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೆ ಅದನ್ನು ನಿರ್ವಹಿಸಲು ಸಿದ್ಧನಿದ್ದೇನೆ ಎಂದು ಗಾಲಿ ಜನಾರ್ದನ ರೆಡ್ಡಿ ಹೇಳಿದ್ದಾರೆ. 25 ನೇ ವಿವಾಹ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಅನುಮತಿ ಪಡೆದು ಬಳ್ಳಾರಿಗೆ ಭೇಟಿ ನೀಡಿದ್ದ ಜನಾರ್ದನ ರೆಡ್ಡಿ, ಕನಕ ದುರ್ಗ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಜನಾರ್ದನ ರೆಡ್ಡಿ 2018 ರ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದಾರೆ.
ಕೇವಲ ಕರ್ನಾಟಕದಲ್ಲಿ ಅಷ್ಟೇ ಅಲ್ಲದೇ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಆಂಧ್ರಪ್ರದೇಶ, ತೆಲಂಗಾಣದಲ್ಲೂ ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಕೆಲಸ ಮಾಡುವುದಾಗಿ ಹೇಳಿದ್ದಾರೆ. 2019 ರಲ್ಲಿಯೂ ಮೋದಿ ನೇತೃತ್ವದ ಸರ್ಕಾರವೇ ಅಸ್ತಿತ್ವಕ್ಕೆ ಬರಲಿದ್ದು, ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿದ್ದಾರೆ, ಅವರ ಗೆಲುವಿಗೆ ಶ್ರಮಿಸುತ್ತೇನೆ ಎಂದು ರೆಡ್ಡಿ ತಿಳಿಸಿದ್ದಾರೆ.
ಕರ್ನಾಟಕದಲ್ಲಿ ಯಡಿಯೂರಪ್ಪ ಅವರನ್ನು ಮತ್ತೆ ಮುಖ್ಯಮಂತ್ರಿಯನ್ನಾಗಿ ಮಾಡುವುದೇ ನಮ್ಮ ಗುರಿಯಾಗಿದ್ದು, ಪಕ್ಷ ಸಂಘಟನೆಗಾಗಿ ರಾಜ್ಯಾದ್ಯಂತ ಪ್ರವಾಸ ಮಾಡುತ್ತೇನೆ ಎಂದು ರೆಡ್ಡಿ ತಿಳಿಸಿದ್ದಾರೆ.