ಮೈಸೂರು: ರಾಜ್ಯ ಕಾಂಗ್ರೆಸ್ ನಾಯಕರ ವರ್ತನೆಯಿಂದ ಬೇಸತ್ತಿರುವ ಮಾಜಿ ಸಂಸದ ಎಚ್ ವಿಶ್ವನಾಥ್ ಅವರು ಶೀಘ್ರದಲ್ಲೇ ಕಾಂಗ್ರೆಸ್ ಗೆ ರಾಜಿನಾಮೆ ನೀಡುವುದಾಗಿ ಶುಕ್ರವಾರ ಹೇಳಿದ್ದಾರೆ.
ಇಂದು ಕೆ.ಆರ್.ನಗರದಲ್ಲಿ ಅಭಿಮಾನಿಳು ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದ ಹಿರಿಯ ಕಾಂಗ್ರೆಸ್ ನಾಯಕ ಎಚ್.ವಿಶ್ವನಾಥ್ ಅವರು, ಅತ್ಯಂತ ನೋವಿನಿಂದ ನಾನು ಪಕ್ಷ ತೊರೆಯಬೇಕಾದ ಪರಿಸ್ಥಿತಿ ಬಂದಿದೆ. ರಾಜಿನಾಮೆ ನೀಡುವ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳುವ ಸಮಯ ಈಗ ಬಂದಿದೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಗೆ ರಾಜಿನಾಮೆ ನೀಡಿದ ನಂತರ ಮುಂದೆ ಯಾವ ಪಕ್ಷ ಸೇರಬೇಕು ಎಂಬುದರ ಬಗ್ಗೆ ಇನ್ನು ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ಈ ಕುರಿತು, ಅಭಿಮಾನಿಗಳು, ಸ್ನೇಹಿತರು ಹಾಗೂ ಹಿತೈಷಿಗಳೊಂದಿಗೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುವುದಾಗಿ ಮಾಜಿ ಸಂಸದರು ತಿಳಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಡೆಯಿಂದ ವಿಶ್ವನಾಥ್ ಅವರು ಬೇಸತ್ತಿದ್ದು, ಜೆಡಿಎಸ್ ಸೇರ್ಪಡೆಯತ್ತ ಒಲವು ವ್ಯಕ್ತಪಡಿಸಿದ್ದಾರೆ. ಇದೇ ಕಾರಣಕ್ಕೆ ಅವರು ಇತ್ತೀಚಿಗೆ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದು, ಮೈಸೂರು ನಗರದಲ್ಲಿ ಶಕ್ತಿ ಪ್ರದರ್ಶನದ ಮೂಲಕವೇ ವಿಶ್ವನಾಥ್ ಅವರೊಂದಿಗೆ ಹಳೆ ಮೈಸೂರು ಭಾಗದ ಅವರ ಬೆಂಬಲಿಗರನ್ನು ಪಕ್ಷಕ್ಕೆ ಸ್ವಾಗತಿಸಲು ಜೆಡಿಎಸ್ ನಾಯಕರು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.