ರಾಜಕೀಯ

ಕೆಪಿಸಿಸಿ ಅಧ್ಯಕ್ಷರಾಗಿ ಪರಮೇಶ್ವರ ಮುಂದುವರಿಕೆ, ಸಿದ್ದರಾಮಯ್ಯ ನೇತೃತ್ವದಲ್ಲೇ ಚುನಾವಣೆ

Lingaraj Badiger
ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಅಧ್ಯಕ್ಷರಾಗಿ ಡಾ.ಜಿ.ಪರಮೇಶ್ವರ ಅವರನ್ನೇ ಮುಂದುವರೆಸುವುದಾಗಿ ಕಾಂಗ್ರೆಸ್ ಹೈಕಮಾಂಡ್ ಬುಧವಾರ ಅಧಿಕೃತವಾಗಿ ಘೋಷಿಸುವ ಮೂಲಕ ಕಳೆದ ಒಂದು ತಿಂಗಳಿಂದ ಭಾರಿ ಚರ್ಚೆಗೆ ಗ್ರಾಸವಾಗಿದ್ದ ರಾಜ್ಯ ಕಾಂಗ್ರೆಸ್ ಅಧ್ಯಕ್ಷರ ನೇಮಕಕ್ಕೆ ತೆರೆ ಎಳೆಯಲಾಗಿದೆ.
ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಈ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು, ಈ ಕೂಡಲೇ ಗೃಹ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿ ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರೆಯುವಂತೆ ಪರಮೇಶ್ವರ ಅವರಿಗೆ ಸೂಚಿಸಿದ್ದಾರೆ.
ಈ ಕುರಿತು ಎಐಸಿಸಿ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲೇ ಮುಂಬರುವ ವಿಧಾನಸಭೆ ಚುನಾವಣೆಯನ್ನು ಪಕ್ಷ ಎದುರಿಸಲಿದೆ ಎಂದು ಸ್ಪಷ್ಟಪಡಿಸಲಾಗಿದೆ. ಈ ಮೂಲಕ ಸಿದ್ದರಾಮಯ್ಯ ಅವರು ಮತ್ತೆ ಪಕ್ಷದ ಮೇಲೆ ಹಿಡಿತ ಸಾಧಿಸಿದ್ದಾರೆ.
ಕಳೆದ ಆರು ವರ್ಷಗಳಿಂದ ಕೆಪಿಸಿಸಿ ಅಧ್ಯಕ್ಷ ಹುದ್ದೆ ನಿಭಾಯಿಸುವ ಮೂಲಕ ಕಾಂಗ್ರೆಸ್​ನಲ್ಲಿ ಹೊಸ ದಾಖಲೆ ಬರೆದಿರುವ ಪರಮೇಶ್ವರ್ ಮುಂದಿನ ಚುನಾವಣೆ ತನಕವೂ ಅಧ್ಯಕ್ಷರಾಗಿ ಮುಂದುವರೆಯಲಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಪ್ರಬಲ ಆಕಾಂಕ್ಷಿಯಾಗಿದ್ದ ಇಂಧನ ಸಚಿವ ಡಿ.ಕೆ. ಶಿವಕುಮಾರ್ ಅವರಿಗೆ ಚುನಾವಣಾ ಪ್ರಚಾರ ಸಮಿತಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಅಲ್ಲದೆ ಮತ್ತೊಬ್ಬ ಆಕಾಂಕ್ಷಿ ಮಾಜಿ ಸಚಿವ ಎಸ್ ಆರ್ ಪಾಟೀಲ್ ಅವರನ್ನು ಕೆಪಿಸಿಸಿ ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
ಮಾಜಿ ಕೇಂದ್ರ ಸಚಿವ ಹಾಗೂ ಸಂಸದ ಕೆ.ಎಚ್ ಮುನಿಯಪ್ಪ ಅವರನ್ನು ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ವಿಶೇಷ ಆಹ್ವಾನಿತರನ್ನಾಗಿ ಮಾಡಲಾಗಿದೆ.
ಇನ್ನು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ.
ಚುನಾವಣೆ ವರ್ಷದಲ್ಲಿ ದಲಿತರನ್ನು ಬಿಟ್ಟುಕೊಟ್ಟೆವು ಎಂಬ ಸಂದೇಶ ಯಾವುದೇ ಕಾರಣಕ್ಕೂ ರವಾನೆಯಾಗುವುದು ಬೇಡ ಎಂಬ ಉದ್ದೇಶದಿಂದ ಕಾಂಗ್ರೆಸ್ ಹೈಕಮಾಂಡ್ ಪರಮೇಶ್ವರ ಅವರನ್ನು ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರಿಸಲು ನಿರ್ಧರಿಸಿದ್ದು, ಗೃಹ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡುವಂತೆ ಸೂಚಿಸಲಾಗಿದೆ. ಹೀಗಾಗಿ ನಾಳೆ ಪರಮೇಶ್ವರ ಅವರು ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡುವ ಸಾಧ್ಯತೆ ಇದ್ದು, ಗೃಹ ಖಾತೆಯ ಹೊಣೆಯನ್ನು ಮತ್ತೆ ಬೆಂಗಳೂರು ಅಭಿವೃದ್ಧಿ ಸಚಿವರಾಗಿರುವ ಕೆ.ಜೆ.ಜಾರ್ಜ್ ಅವರಿಗೆ ವಹಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
SCROLL FOR NEXT