ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿ ಜಿ. ಪರಮೇಶ್ವರ್ ಮುಂದುವರಿಯುವ ಹಿನ್ನೆಲೆಯಲ್ಲಿ ಗೃಹ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಬೇಕಿದೆ. ಆದರೆ ತೆರವಾಗುವ ಗೃಹ ಸಚಿವ ಹುದ್ದೆಯನ್ನು ಯಾರು ಅಲಂಕರಿಸಲಿದ್ದಾರೆ ಎಂಬುದು ಎಲ್ಲರ ಪ್ರಶ್ನೆಯಾಗಿದೆ.
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಕಳೆದ ಹಲವು ದಿನಗಳಿಂದ ದೆಹಲಿಯಲ್ಲಿ ಲಾಬಿ ನಡೆಸುತ್ತಿದ್ದ ಡಿ.ಕೆ ಶಿವಕುಮಾರ್, ಜಿ ಪರಮೇಶ್ವರ್ ಅವರನ್ನು ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಯಲು ಹೈಕಮಾಂಡ್ ನಿರ್ಧರಿಸಿದೆ. ಹೀಗಾಗಿ ಗೃಹಸಚಿವ ಹುದ್ದೆಯನ್ನು ಯಾರು ಅಲಂಕರಿಸುತ್ತಾರೆ ಎಂಬ ಪ್ರಶ್ನೆ ಎಲ್ಲರಲ್ಲೂ ಮೂಡಿದೆ.
ಡಿ.ಕೆ ಶಿವಕುಮಾರ್ ಅವರನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನೇಮಕ ಮಾಡಿದರೆ ಉಂಟಾಗುವ ಸಮಸ್ಯೆಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಹೈಕಮಾಂಡ್ ವಿವರಿಸಿದ್ದಾರೆ. ಹೀಗಾಗಿ ಡಿ.ಕೆ ಶಿವಕುಮಾರ್ ಅವರನ್ನು ಚುನಾವಣಾ ಪ್ರಚಾರ ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.
ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಅವರ ಹೆಸರು ಗೃಹ ಖಾತೆಗೆ ಕೇಳಿ ಬರುತ್ತಿದೆ. ಆದರೆ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಬಳಿಯೇ ಗೃಹಖಾತೆ ಇಟ್ಟುಕೊಳ್ಳುವ ಸಾಧ್ಯತೆಯೂ ಇದೆ. ಜೊತೆಗೆ ಒಕ್ಕಲಿಗ ಮತ್ತು ಲಿಂಗಾಯತ ಸಮುದಾಯದ ನಾಯಕರಿಗೆ ಆದ್ಯತೆ ನೀಡಲಾಗುತ್ತದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಆದರೆ ಜೂನ್ 5 ರಂದು ಆರಂಭವಾಗುವ ಮಾನ್ಸೂನ್ ಅಧಿವೇಶನದಲ್ಲಿ ಎಲ್ಲವೂ ನಿರ್ಧರವಾಗಲಿದೆ.