ರಾಜಕೀಯ

ಸೋಲಾರ್ ಹಗರಣ: ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ವಜಾಕ್ಕೆ ಬಿಜೆಪಿ ಆಗ್ರಹ

Lingaraj Badiger
ಬೆಂಗಳೂರು: ಎಐಎಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರು ಕೇರಳದ ಸೋಲಾರ್ ಹಗರಣದಲ್ಲಿ ಭಾಗಿಯಾಗಿದ್ದು, ಅವರನ್ನು ಈ ಕೂಡಲೇ ವಜಾಗೊಳಿಸಬೇಕು ಎಂದು ಪ್ರತಿ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ಅವರು ಶುಕ್ರವಾರ ಆಗ್ರಹಿಸಿದ್ದಾರೆ.
ಇಂದು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಶೆಟ್ಟರ್, ಕೇರಳದ ವಿಧಾನಸಭೆಯಲ್ಲಿ ಸೋಲಾರ್ ಹಗರಣದ ವರದಿ ಮಂಡನೆಯಾಗಿದ್ದು, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಹೆಸರು ಕೇಳಿ ಬಂದಿದೆ. ಜತೆಗೆ, ಅವರ ವಿರುದ್ಧ ಈಗಾಗಲೇ ಅತ್ಯಾಚಾರ ಪ್ರಕರಣದ ಆರೋಪವಿದ್ದು, ಕೂಡಲೇ ತಮ್ಮ  ಸ್ಥಾನದಿಂದ ಕೆಳಗಿಳಿಯಬೇಕು ಎಂದು ಒತ್ತಾಯಿಸಿದರು.
‘ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣದ ಆರೋಪ ಎದುರಿಸುತ್ತಿರುವ ಕೆ.ಸಿ.ವೇಣುಗೋಪಾಲ್‌ ಸಂತ್ರಸ್ತ ಮಹಿಳೆಗೆ ಹಲವು ಬಾರಿ ಬೆದರಿಕೆ ಹಾಕಿದ್ದಾರೆ ಈ ಕುರಿತು ತನಿಖಾ ವರದಿಯಲ್ಲಿ ಉಲ್ಲೇಖವಾಗಿದ್ದು, ಇಂತಹವರು ರಾಜ್ಯದ ಉಸ್ತುವಾರಿ ಆಗಿರಬೇಕಾ..? ಎಂದು ಶೆಟ್ಟರ್ ಪ್ರಶ್ನಿಸಿದರು. 
ಅಪರಾಧ ಆರೋಪ ಎದುರಿಸುತ್ತಿರುವ ಕೆ.ಸಿ.ವೇಣುಗೋಪಾಲ್‌ ರಾಜ್ಯ ಕಾಂಗ್ರೆಸ್‌ ಉಸ್ತುವಾರಿಯಾಗಿ ಮುಂದುವರಿಯುವುದು ಸೂಕ್ತವಲ್ಲ. ಹಾಗಾಗಿ ನೈತಿಕ ಹೊಣೆ ಹೊತ್ತು ಕಾಂಗ್ರೆಸ್‌ ಹೈಕಮಾಂಡ್‌ ಕೆ.ಸಿ.ವೇಣುಗೋಪಾಲ್‌ ಅವರನ್ನು ವಾಪಸ್ ಕರೆಸಿಕೊಳ್ಳಬೇಕು ಇಲ್ಲದಿದರೇ ಅವರ ವಿರುದ್ಧ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. 
ಇದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧವೂ ವಾಗ್ದಾಳಿ ನಡೆಸಿದ ಶೆಟ್ಟರ್, ಸಿದ್ದರಾಮಯ್ಯ ಮಾತೆತ್ತಿದ್ದರೆ ಬಿಜೆಪಿ ಅವರು ಜೈಲಿಗೆ ಹೋಗಿ ಬಂದಿದ್ದಾರೆ ಎನ್ನುತ್ತಿದ್ದಾರೆ. ಆದರೆ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌ ವಿರುದ್ಧ ಕೇಳಿ ಬಂದಿರುವ ಆರೋಪಗಳ ಕುರಿತು ಏನು ಹೇಳುತ್ತಾರೆ ಎಂಬುದನ್ನು ಕಾದು ನೋಡಬೇಕು ಎಂದರು.
SCROLL FOR NEXT