ಬೆಂಗಳೂರು: ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಅವರು ರಾಜ್ಯ ರಾಜಕಾರಣಕ್ಕೆ ಬರಬೇಕು ಎಂದು ಮಂಡ್ಯ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ರಮ್ಯಾ ಅಭಿಮಾನಿಗಳು ಮನವಿ ಮಾಡಿದ ಬೆನ್ನಲ್ಲೇ, ಅವರು ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಮಂಡ್ಯದಿಂದ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.
ಸದ್ಯ ಕಾಂಗ್ರೆಸ್ ಸಾಮಾಜಿಕ ಮಾಧ್ಯಮ ಮುಖ್ಯಸ್ಥೆಯಾಗಿರುವ ರಮ್ಯ ಅವರು ಮಂಡ್ಯದಿಂದ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಬೇಕು ಎಂದು ಮಂಡ್ಯ ಜನ ಬಯಸಿದ್ದಾರೆ. ರಮ್ಯಾ ಅವರು ರಾಜ್ಯ ಮತ್ತು ರಾಷ್ಟ್ರ ರಾಜಕಾರಣದಲ್ಲಿ ಸಕ್ರಿಯರಾಗಿದ್ದು, ಪಕ್ಷ ಅವರನ್ನು ಮುಂದಿನ ವಿಧಾನಸಭೆಯಲ್ಲಿ ಕಣಕ್ಕಿಳಿಸಬೇಕು. ಆದರೆ ಹೈಕಮಾಂಡ್ ಈ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಬೆಂಗಳೂರು ಗ್ರಾಮಾಂತರ ಸಂಸದ ಡಿ ಕೆ ಸುರೇಶ್ ಅವರು ಹೇಳಿದ್ದಾರೆ.
ಈ ನಡುವೆ ಮಂಡ್ಯ ಹಾಲಿ ಶಾಸಕ, ಮಾಜಿ ಸಚಿವ ಹಾಗೂ ಹಿರಿಯ ನಟ ಅಂಬರೀಶ್ ಅವರು ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ತಾವು ಸ್ಪರ್ಧಿಸುವ ಬಗ್ಗೆಯೇ ಅನುಮಾನ ವ್ಯಕ್ತಪಡಿಸಿದ್ದಾರೆ. ಚುನಾವಣೆಗೆ ಸ್ಪರ್ಧಿಸುವಂತೆ ಹೈಕಮಾಂಡ್ ಸೂಚಿಸಿದರೆ ಸ್ಪರ್ಧಿಸುತ್ತೇನೆ. ಆದರೆ ಮಂಡ್ಯದಲ್ಲಿ ರಮ್ಯಾ ಸ್ಪರ್ಧಿಸುವುದನ್ನು ನಾವು ಸ್ವಾಗತಿಸುತ್ತೇನೆ ಎಂದು ಹೇಳಿದ್ದಾರೆ.
ರಮ್ಯಾ ಅವರು ಸಂಸದೆಯಾಗಿದ್ದ ಅಲ್ಪಾವಧಿಯಲ್ಲೇ ಮಂಡ್ಯ ಜಿಲ್ಲೆಯಲ್ಲಿ ಹಲವು ಯೋಜನೆಗಳನ್ನು ತಂದು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಹೀಗಾಗಿ ಅವರು ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ಮತ್ತೆ ರಾಜ್ಯ ರಾಜಕಾರಣಕ್ಕೆ ಬರಬೇಕು. ಮಂಡ್ಯ ಜಿಲ್ಲೆಯ ಯಾವುದಾದರೊಂದು ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಬೇಕು ಎಂದು ರಮ್ಯಾ ಅಭಿಮಾನಿಗಳು ಮನವಿ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics