ಶಿಕ್ಷಣ ಇಲಾಖೆ ಕಾರ್ಯದರ್ಶಿ ವರ್ಗಾವಣೆ: ಸಿಎಂ ವಿರುದ್ಧ ತನ್ವೀರ್ ಸೇಠ್ ಅಸಮಾಧಾನ
ಐಎಎಸ್ ಅಧಿಕಾರಿಗಳ ವರ್ಗಾವಣೆ ಸಂಬಂಧ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್ ಸಿಎಂ ಸಿದ್ದರಾಮಯ್ಯ ವಿರುದ್ಧ ಅಸಮಾಧಾನ...
ಬೆಂಗಳೂರು: ಐಎಎಸ್ ಅಧಿಕಾರಿಗಳ ವರ್ಗಾವಣೆ ಸಂಬಂಧ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್ ಸಿಎಂ ಸಿದ್ದರಾಮಯ್ಯ ವಿರುದ್ಧ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಮೇಲ್ವಿಚಾರಣೆ ನೋಡಿಕೊಳ್ಳುತ್ತಿದ್ದ ಐಎಎಸ್ ಅಧಿಕಾರಿ ಅಜಯ್ ಸೇಠ್ ಅವರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ವರ್ಗಾವಣೆ ಮಾಡಲಾಗಿದೆ.
ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಗಳ ಹಿನ್ನೆಲೆಯಲ್ಲಿ ಇನ್ನೂ ಆರು ತಿಂಗಳ ಕಾಲ ಅಜಯ್ ಸೇಠ್ ಅವರನ್ನು ವರ್ಗಾವಣೆ ಮಾಡದಂತೆ ಸಿಎಂ ಬಳಿ ತನ್ವೀರ್ ಸೇಠ್ ಮನವಿ ಮಾಡಿದ್ದರು. ಪರೀಕ್ಷೆ ಸಿದ್ಧತೆ ಸಮಯ ಸಮೀಪಿಸುತ್ತಿರುವುದರಿಂದ ಅವರನ್ನು ಮಾತೃ ಇಲಾಖೆಯಲ್ಲಿಯೇ ಉಳಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಪದೇ ಪದೇ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ, ಈ ಸಂಬಂಧ ತನ್ವೀರ್ ಸೇಠ್ ಅಧಿಕೃತವಾಗಿ ಸಿಎಂ ಅವರಿಗೆ ಪತ್ರ ಬರೆದಿದ್ದಾರೆ. ಹೀಗಿದ್ದರೂ ಅಜಯ್ ಸೇಠ್ ಅವರನ್ನು ಆರೋಗ್ಯ ಇಲಾಖೆಗೆ ವರ್ಗಾಯಿಸಲಾಗಿದೆ.
2017-18ರ ಬಜೆಟ್ ನಲ್ಲಿ ಘೋಷಿಸಿರುವ ಯೋಜನೆಗಳನ್ನು ಮಾರ್ಚ್ 2018ರ ವೇಳೆಗೆ ಪೂರ್ಣಗೊಳಿಸಬೇಕಾದ ಅನಿವಾರ್ಯತೆಯಿದೆ. ಕಳೆದ ವರ್ಷದ ಪಿಯುಸಿ ಮತ್ತು ಎಸ್ ಎಸ್ ಎಲ್ ಸಿ ಪರೀಕ್ಷೆಗಳು ಯಾವುದೇ ಒಂದು ಸಣ್ಣ ತಪ್ಪುಗಳಿಲ್ಲದೇ ಪೂರ್ಣಗೊಂಡಿದ್ದವು. ಇದಕ್ಕಾಗಿ ಮೆಚ್ಚುಗೆ ಕೂಡ ವ್ಯಕ್ತವಾಗಿತ್ತು, 2018ರ ಮಾರ್ಚ್ ಪರೀಕ್ಷೆ ಕೂಡ ಇದೇ ರೀತಿ ಆಗಬೇಕಿದೆ. ಈ ಎಲ್ಲಾ ಅಂಶಗಳನ್ನು ಪರಿಗಣಿಸಿ ಇಲಾಖೆಯ ಹಿತಾಸಕ್ತಿ ದೃಷ್ಟಿಯಿಂದ ಅಜಯ್ ಸೇಠ್ ಅವರನ್ನು ಪ್ರಾಥಮಿಕ ಶಿಕ್ಷಣ ಇಲಾಖೆಯಲ್ಲಿಯೇ ಮುಂದುವರಿಸಬೇಕೆಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.