ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ
ಬೆಂಗಳೂರು: ಡಿವೈಎಸ್'ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಜೆ.ಜಾರ್ಜ್ ವಿರುದ್ಧ ಹೋರಾಟವನ್ನು ಸ್ಥಗಿತಗೊಳಿಸಿದ್ದ ಬಿಜೆಪಿ, ಇದೀಗ ಮತ್ತೆ ಪ್ರತಿಭಟನೆಗೆ ಅಣಿಯಾಗಿದ್ದು, ಸಚಿವರ ರಾಜೀನಾಮೆಗೆ ಆಗ್ರಹಿಸಿ ವ್ಯವಸ್ಥಿತವಾಗಿ ಪ್ರತಿಭಟನೆ ನಡೆಸಲು ತೀರ್ಮಾನಿಸಿದೆ.
ಡಿವೈಎಸ್'ಪಿ ಗಣಪತಿ ಆತ್ಮಹತ್ಯೆ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಸಿಬಿಐ ಅಧಿಕಾರಿಗಳು ನಿನ್ನೆಯಷ್ಟೇ ಸಚಿವ ಜಾರ್ಜ್ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡು ತನಿಖೆ ಆರಂಭಿಸಿದೆ.
ಹೀಗಾಗಿ, ಜಾರ್ಜ್ ಅವರು ಸಚಿವ ಸ್ಥಾನದಲ್ಲಿ ಮುಂದುವರೆಯಬಾರದು. ಒಂದೋ ಜಾರ್ಜ್ ರಾಜೀನಾಮೆ ನೀಡಬೇಕು... ಇಲ್ಲವೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡಲೇ ಸಚಿವ ಸ್ಥಾನದಿಂದ ವಜಾಗೊಳಿಸಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ಒತ್ತಾಯಿಸಿದ್ದಾರೆ.
ನಿನ್ನೆ ರಾತ್ರಿ ಪಕ್ಷದ ಕಚೇರಿಯಲ್ಲಿ ತುರ್ತು ಪತ್ರಿಕಾಗೋಷ್ಠಿ ನಡೆಸಿದ ಯಡಿಯೂರಪ್ಪ ಅವರು, ಜಾರ್ಜ್ ಅವರು ಸಚಿವರಾಗಿ ಮುಂದುವರಿದರೆ ಸಾಕ್ಷ್ಯ ನಾಶಪಡಿಸುವ ಸಾಧ್ಯತೆ ಇದೆ. ರಾಜ್ಯ ಸರ್ಕಾರ ಪ್ರಕರಣವನ್ನು ಸಿಐಡಿಗೆ ಒಪ್ಪಿಸಿ ಸಚಿವರಿಗೆ ಕ್ಲೀನ್ ಚಿಟ್ ಕೊಡಿಸಿತ್ತು. ಇದೀಗ ಸಿಬಿಐ ತನಿಖೆ ಕೈಗೊಂಡು ಎಫ್ಐಆರ್ ದಾಖಲಿಸಿದೆ. ಹೀಗಾಗಿ ಜಾರ್ಜ್ ಅವರು ಕೂಡಲೇ ರಾಜೀನಾಮೆಯನ್ನು ನೀಡಬೇಕು. ಅಥವಾ ಮುಖ್ಯಮಂತ್ರಿಗಳೇ ಸಚಿವ ಸ್ಥಾನದಿಂದ ಅವರನ್ನು ಕೈಬಿಡಬೇಕು ಎಂದು ಆಗ್ರಹಿಸಿದ್ದಾರೆ.