ರಾಜಕೀಯ

ಸಿಎಂ ಸಿದ್ದರಾಮಯ್ಯ ಪ್ರತಿ ಬಾರಿಯೂ ಜಾರ್ಜ್ ರನ್ನು ರಕ್ಷಿಸಲು ಸಾಧ್ಯವಿಲ್ಲ: ಜಾವಡೆಕರ್

Lingaraj Badiger
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಪ್ರತಿ ಬಾರಿಯೂ ನಗರಾಭಿವೃದ್ಧಿ ಸಚಿವ ಕೆಜೆ ಜಾರ್ಜ್ ಅವರನ್ನು ರಕ್ಷಿಸಲು ಸಾಧ್ಯವಿಲ್ಲ ಎಂದು ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಹಾಗೂ ಕೇಂದ್ರ ಸಚಿವ ಪ್ರಕಾಶ್ ಜಾವಡೆಕರ್ ಅವರು ಶುಕ್ರವಾರ ಹೇಳಿದ್ದಾರೆ.
ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ನಗರದಲ್ಲಿ ವರದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಜಾವಡೆಕರ್ ಅವರು, ಪ್ರಕರಣದಲ್ಲಿ ಮೊದಲನೇ ಆರೋಪಿಯಾಗಿರುವ ಸಚಿವ ಜಾರ್ಜ್ ಅವರು ರಾಜಿನಾಮೆ ಕೊಡಲೇಬೇಕು. ಕೇಂದ್ರದ ನಿರ್ದೇಶನದಂತೆ ಸಿಬಿಐ ಎಫ್ಐಆರ್ ದಾಖಲಿಸಿಲ್ಲ, ಸುಪ್ರೀಂಕೋರ್ಟ್ ನಿರ್ದೇಶನದಂತೆ ಎಫ್ಐಆರ್ ದಾಖಲಿಸಿದೆ. ಹಾಗಾಗಿ ಈ ಬಾರಿ ಜಾರ್ಜ್ ಅವರನ್ನು ರಕ್ಷಿಸಿಕೊಳ್ಳಲು ಸಿಎಂಗೆ ಸಾಧ್ಯವಿಲ್ಲ ಎಂದರು.
ಡಿವೈಎಸ್ಪಿ ಆತ್ಮಹತ್ಯೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರು ರಕ್ಷಣಾತ್ಮಕವಾಗಿ ವರ್ತಿಸುತ್ತಿದ್ದಾರೆ. ಈ ಪ್ರಕರಣದಲ್ಲಿ ಫೋರೆನ್ಸಿಕ್ ವರದಿಗೂ ಮೊದಲೇ ಬಿ ರಿಪೋರ್ಟ್ ಹಾಕಲಾಗಿತ್ತು, ಆದರೆ ಸುಪ್ರೀಂಕೋರ್ಟ್ ಬಿ ರಿಪೋರ್ಟ್ ಅನ್ನು ಒಪ್ಪಿಕೊಂಡಿಲ್ಲ ಎಂದರು.
ಗಣಪತಿ ಪ್ರಕರಣದಲ್ಲಿ ಕೆಜೆ ಜಾರ್ಜ್ ಅವರ ರಾಜಿನಾಮೆ ಪಡೆಯುವುದಿಲ್ಲ ಎಂದು ಸಿದ್ದರಾಮಯ್ಯ ಪತ್ರಿಕಾಗೋಷ್ಠಿಯಲ್ಲಿ ಪ್ರಕಟಿಸಿದ ಬಳಿಕ, ಸಂಜೆ ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಪ್ರಕಾಶ್ ಜಾವಡೆಕರ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಜಂಟಿ ಪತ್ರಿಕಾಗೋಷ್ಠಿ ನಡೆಸಿದರು.
SCROLL FOR NEXT