ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಇನ್ನೇನು ಕೆಲವೇ ತಿಂಗಳು ಬಾಕಿ ಇದ್ದು, ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಅಧಿಕಾರಕ್ಕಾಗಿ ಈಗ ಉತ್ತರ ಕರ್ನಾಟಕದತ್ತ ಮುಖ ಮಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರ ಸ್ವಾಮಿ ಅವರು 2018ರ ವಿಧಾನಸಭೆ ಚುನಾವಣೆಯಲ್ಲಿ ಉತ್ತರ ಕರ್ನಾಟಕದಿಂದಲೇ ಸ್ಪರ್ಧೆಗಿಳಿಯಲಿದ್ದಾರೆಂಬ ಸುದ್ದಿ ಇದೀಗ ತೀವ್ರತೆ ಪಡೆಯತೊಡಗಿದೆ.
ಯಡಿಯೂರಪ್ಪ ಅವರು ಈಗಾಗಲೇ ಉತ್ತರ ಕರ್ನಾಟಕ ಭಾಗದಲ್ಲಿ ಸ್ಪರ್ಧಿಸುವುದಾಗಿ ಖಚಿತಪಡಿಸಿದ್ದಾರೆ. ಇದರ ಬೆನ್ನಲ್ಲೇ ಈಗ ಕೆಲವು ಕಾಂಗ್ರೆಸ್ ನಾಯಕರು ಉತ್ತರ ಕರ್ನಾಟಕದಿಂದ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಒತ್ತಡ ಹಾಕುತ್ತಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಯಾವುದಾದರು ಒಂದು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವಂತೆ ಸಿದ್ದರಾಮಯ್ಯ ಅವರಿಗೆ ಅಬಕಾರಿ ಸಚಿವ ಆರ್ ಬಿ ತಿಮ್ಮಾಪುರ ಅವರು ಒತ್ತಾಯಿಸಿರುವುದಾಗಿ ಮೂಲಗಳು ತಿಳಿಸಿವೆ. ಅಲ್ಲದೆ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ಸತೀಶ್ ಜಾರಕಿಹೊಳಿ ಅವರು ಸಹ ಬೆಳಗಾವಿ ಜಿಲ್ಲೆಯ ಅಥಣಿ ಕ್ಷೇತ್ರದಿಂದ ಸ್ಪರ್ಧಿಸುವಂತೆ ಸಿಎಂಗೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉತ್ತರ ಕರ್ನಾಟಕದಿಂದ ಸ್ಪರ್ಧಿಸುವುದರಿಂದ ಬಿ ಎಸ್ ಯಡಿಯೂರಪ್ಪ ಅವರಿಗೆ ಪ್ರತಿಸ್ಪರ್ಧಿಯಾಗುವುದಲ್ಲದೆ ಈ ಭಾಗದ ಕಾಂಗ್ರೆಸ್ ಕಾರ್ಯಕರ್ತರಿಗೆ ನೈತಿಕ ಬಲ ತುಂಬಿದಂತಾಗುತ್ತದೆ ಎಂಬುದು ಕಾಂಗ್ರೆಸ್ ಹಿರಿಯ ನಾಯಕರ ಅಭಿಪ್ರಾಯ.
ಕಾಂಗ್ರೆಸ್ ಹೈಕಮಾಂಡ್ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲೇ ಮುಂದಿನ ವಿಧಾನಸಭೆ ಚುನಾವಣೆ ಎದುರಿಸಲಾಗುವುದು ಎಂದು ಸ್ಪಷ್ಟಡಿಸಿದೆ. ರಾಜ್ಯದಲ್ಲಿ ಅಧಿಕಾರ ಹಿಡಿಯಬೇಕಾದರೆ ಉತ್ತರ ಕರ್ನಾಟಕದಲ್ಲಿ ಹೆಚ್ಚಿನ ಸ್ಥಾನ ಗಳಿಸಬೇಕೆಂಬ ಉದ್ದೇಶದೊಂದಿಗೆ ಮೂರು ಪ್ರಮುಖ ಪಕ್ಷಗಳು ತಮ್ಮ ದಳಪತಿಗಳನ್ನು ಈ ಭಾಗದಿಂದಲೇ ಕಣಕ್ಕಿಳಿಸಲು ಗಂಭೀರ ಚಿಂತನೆ ನಡೆಸಿವೆ. ಆದರೆ ಕಾಂಗ್ರೆಸ್ ಮೂಲಗಳ ಪ್ರಕಾರ, ಸಿದ್ದರಾಮಯ್ಯ ಅವರು ವರುಣಾ ಕ್ಷೇತ್ರವನ್ನು ತಮ್ಮ ಪುತ್ರ ಡಾ.ಯತೀಂದ್ರ ಅವರಿಗೆ ಬಿಟ್ಟುಕೊಟ್ಟು ತಾವು ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸಲು ನಿರ್ಧರಿಸಿದ್ದಾರೆ. ಮತ್ತೊಂದು ಮೂಲಗಳ ಪ್ರಕಾರ, ಪಕ್ಷದ ಹೈಕಮಾಂಡ್ ಒಂದು ದಕ್ಷಿಣ ಕರ್ನಾಟಕದ ಕ್ಷೇತ್ರ ಮತ್ತೊಂದು ಉತ್ತರ ಕರ್ನಾಟಕ ಎರಡೂ ಕ್ಷೇತ್ರಗಳಲ್ಲಿ ಸ್ಪರ್ಧಿಸುವಂತೆ ಸಿಎಂಗೆ ಸೂಚನೆ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.
ಇನ್ನು ಈ ಬಗ್ಗೆ ವರದಿಗಾರರಿಗೆ ಪ್ರತಿಕ್ರಿಯಿಸಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಎಸ್ ಆರ್ ಪಾಟೀಲ್ ಅವರು, ಬಾಗಲಕೋಟೆ ಜಿಲ್ಲೆಯಿಂದ ಸ್ಪರ್ಧಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಕಾರ್ಯಕರ್ತರು ಒತ್ತಾಯಿಸಿದ್ದಾರೆ. ಆದರೆ ಇನ್ನು ಯಾವುದೂ ಅಂತಿಮವಾಗಿಲ್ಲ ಎಂದಿದ್ದಾರೆ.
ಯಾವುದೇ ಕ್ಷೇತ್ರದಿಂದ ಸ್ಪರ್ಧಿಸಲು ಸಿದ್ಧ: ಸಿಎಂ
ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಉತ್ತರ ಕರ್ನಾಟಕದಿಂದ ಸ್ಪರ್ಧಿಸಬೇಕು ಎಂಬ ವಿಚಾರದ ಬಗ್ಗೆ ನಾನು ಮುಕ್ತವಾಗಿದ್ದೇನೆ. ಉತ್ತರ ಕರ್ನಾಟದಿಂದ ಸ್ಪರ್ಧಿಸುವಂತೆ ಹಲವು ಜನ ಆಹ್ವಾನ ನೀಡಿದ್ದಾರೆ. ಈ ಹಿಂದೆ ನಾನು ಕೊಪ್ಪಳದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡಿದ್ದೆ. ರಾಜ್ಯದ ಯಾವುದೇ ಭಾಗದಲ್ಲೂ ಸ್ಪರ್ಧಿಸಲು ನಾನು ಸಿದ್ಧ. ಆದರೆ ಈ ಬಗ್ಗೆ ಹೈಕಮಾಂಡ್ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics