ರಾಜಕೀಯ

ತೇರದಾಳದಿಂದ ಸ್ಪರ್ಧಿಸುತ್ತೇನೆ ಎಂಬ ವರದಿಯಲ್ಲಿ ಸತ್ಯಾಂಶವಿಲ್ಲ: ಬಿಎಸ್ ವೈ

Lingaraj Badiger
ಬೆಂಗಳೂರು: ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ನಾನು ಬಾಗಲಕೋಟೆ ಜಿಲ್ಲೆಯ ತೇರದಾಳ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂಬ ವರದಿಯಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಮಂಗಳವಾರ ಸ್ಪಷ್ಟಪಡಿಸಿದ್ದಾರೆ.
ಯಡಿಯೂರಪ್ಪ ಅವರು ಉತ್ತರ ಕರ್ನಾಟಕ ಭಾಗದ ತೇರದಾಳ ಕ್ಷೇತ್ರವನ್ನು ಅಂತಿಮಗೊಳಿಸಿದ್ದು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಉಮಾಶ್ರೀ ಅವರ ವಿರುದ್ಧ ಸ್ಪರ್ಧಿಸಲಿದ್ದಾರೆ ಎಂಬ ಮಾಧ್ಯಮಗಳ ವರದಿ ಬಗ್ಗೆ ಇಂದು ವರದಿಗಾರರಿಗೆ ಪ್ರತಿಕ್ರಿಯಿಸಿದ ಬಿಎಸ್ ವೈ, ತೇರದಾಳದಿಂದ ಸ್ಪರ್ಧಿಸುತ್ತೇನೆ ಎಂಬ ವರದಿಯಲ್ಲಿ ಯಾವುದೇ ಸತ್ಯಾಂಶವಿಲ್ಲ. ನಾನು ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕೆಂಬುದು ಇನ್ನೂ ಅಂತಿಮವಾಗಿಲ್ಲ ಎಂದಿದ್ದಾರೆ.
ತೇರದಾಳ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂಬ ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರವಾದ ನಂತರ, ನೀವು ರಾಜಕೀಯವಾಗಿ ಬೆಳೆದ ಕ್ಷೇತ್ರವನ್ನು ಯಾಕೆ ಬಿಡ್ತೀರಿ ಎಂದು ಶಿಕಾರಿಪುರದ ಜನ ನನ್ನನ್ನು ಪ್ರಶ್ನಿಸುತ್ತಿದ್ದಾರೆ ಎಂದು ಹೇಳಿದ್ದಾರೆ.
ನಾನು ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕೆಂಬುದನ್ನು ಹೈಕಮಾಂಡ್ ಜತೆ ಚರ್ಚಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತೇನೆ. ಆದರೆ ತೇರದಾಳ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂಬ ವಿಚಾರ ಸತ್ಯಕ್ಕೆ ದೂರವಾದದ್ದು ಎಂದು ಯಡಿಯೂರಪ್ಪ ಅವರು ತಿಳಿಸಿದ್ದಾರೆ.
SCROLL FOR NEXT