ಚನ್ನಪಟ್ಟಣ- ರಾಮನಗರ ಎರಡೂ ಕ್ಷೇತ್ರಗಳಿಂದ ಕುಮಾರಸ್ವಾಮಿ ಸ್ಪರ್ಧೆ: ದೇವೇಗೌಡ
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಚನ್ನಪಟ್ಟಣ ಮತ್ತು ರಾಮನಗರ ಎರಡು ಕ್ಷೇತ್ರಗಳಿಂದ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಕಣಕ್ಕಿಳಿಯಲಿದ್ದಾರೆ...
ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಚನ್ನಪಟ್ಟಣ ಮತ್ತು ರಾಮನಗರ ಎರಡು ಕ್ಷೇತ್ರಗಳಿಂದ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಕಣಕ್ಕಿಳಿಯಲಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹೇಳಿದ್ದಾರೆ. ಈ ಮೂಲಕ ಎದ್ದಿದ್ದ ಹಲವು ಊಹಾ ಪೋಹಗಳಿಗೆ ಅವರು ತೆರೆ ಎಳೆದಿದ್ದಾರೆ.
ಚನ್ನಪಟ್ಟಣದಲ್ಲಿ ನಡೆದ ಜೆಡಿಎಸ್ ಸಮಾವೇಶದಲ್ಲಿ ಮಾತನಾಡಿದ ದೇವೇಗೌಡ, ರಾಮನಗರ ಮತ್ತು ಚನ್ನಪಟ್ಟಣ ಎರಡು ಕ್ಷೇತ್ರಗಳಿಂದಲೂ ಕುಮಾರಸ್ವಾಮಿ ಕಣಕ್ಕಿಳಿಯಲಿದ್ದಾರೆ ಎಂದು ಘೋಷಿಸಿದ್ದಾರೆ. ಈ ವೇಳೆ ಕುಮಾರಸ್ವಾಮಿ ಪತ್ನಿ ಅನಿತಾ ಕೂಡ ಜೊತೆಗಿದ್ದರು.
ಇನ್ನೂ ತಾವು ಈ ಮೊದಲೇ ನೀಡಿದ್ದ ಹೇಳಿಕೆಗೆ ಬದ್ದರಾಗಿದ್ದು ತಮ್ಮ ಕುಟುಂಬದಿಂದ ಕೇವಲ ಇಬ್ಬರು ಅಂದರೆ ಕುಮಾರ ಸ್ವಾಮಿ ಮತ್ತು ಎಚ್ ಡಿ ರೇವಣ್ಣ ಮಾತ್ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂದು ಪುನರುಚ್ಚರಿಸಿದರು.ಅಪ್ಪ ಮಕ್ಕಳ ಪಕ್ಷ ಎಂಬ ಹಣೆ ಪಟ್ಟಿಯನ್ನು ತೆಗೆದುಹಾಕಲು ಈ ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿದರು.
ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ದೇವೇಗೌಡ, ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ವೇಳೆಯಲ್ಲಿ ಹೆಚ್ಚಿನ ಅಭಿವೃದ್ಧಿ ಕಾರ್ಯಗಳು ನಡೆದಿದ್ದವು ಎಂದು ಹೇಳಿದರು. ಜೆಡಿಎಸ್ ಅಧಿಕಾರಕ್ಕೆ ಬಂದರೇ, 24 ಗಂಟೆಗಳೊಳಗೆ ರೈತರ 51 ಸಾವಿರ ಕೋಟಿ ರು ಸಾಲವನ್ನು ಮನ್ನಾ ಮಾಡುವುದಾಗಿ ಕುಮಾರಸ್ವಾಮಿ ಹೇಳಿದ್ದಾರೆ.