ಬೆಂಗಳೂರು : ಮೈಸೂರು ಜಿಲ್ಲೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಪ್ರಬಲ ಎದುರಾಳಿ ಎದುರಿಸಬೇಕಾಗುವುದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಮೇ 12 ರಂದು ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಸುರಕ್ಷತೆಗಾಗಿ ಉತ್ತರ ಕರ್ನಾಟಕದ ಬಾದಾಮಿ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆ ಹೆಚ್ಚಾಗಿದೆ.
ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿಎಂ ಸಿದ್ದರಾಮಯ್ಯ ಪರ ಹೆಚ್ಚಿನ ಒಲವು ಇಲ್ಲದ ಕಾರಣ ಬಾದಾಮಿಯನ್ನು ಎರಡನೇ ಕ್ಷೇತ್ರವನ್ನಾಗಿ ಮುಖ್ಯಮಂತ್ರಿ ಆಯ್ಕೆ ಮಾಡಿಕೊಳ್ಳಲು ನಿರ್ಧರಿಸಿದ್ದಾರೆ.
ಈ ಮಧ್ಯೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಇನ್ನೂ ಬಿಡುಗಡೆಯಾಗಿಲ್ಲ. ಎರಡನೇ ಕ್ಷೇತ್ರದಿಂದ ಸ್ಪರ್ಧಿಸುವ ಬಗ್ಗೆ ಸಿದ್ದರಾಮಯ್ಯ ಅವರಿಗೆ ಪೂರ್ಣ ಸ್ವಾತಂತ್ರ್ಯವನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ನೀಡಿದ್ದಾರೆ ಎಂಬಂತಹ ಮಾಹಿತಿ ತಿಳಿದುಬಂದಿದೆ.
ಸಿದ್ದರಾಮಯ್ಯ ಜೊತೆ ಮಾತುಕತೆ ನಡೆಸಿದ ಬಳಿಕ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಎಸ್ . ಆರ್. ಪಾಟೀಲ್ , ಬಾದಾಮಿ ಕ್ಷೇತ್ರದಿಂದ ಸ್ಪರ್ಧಿಸುವುದರಿಂದ ಉತ್ತರ ಕರ್ನಾಟಕ ವಲಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚು ಅನುಕೂಲವಾಗಲಿದೆ ಎಂದು ಸಭೆಯ ವೇಳೆ ಸಿದ್ದರಾಮಯ್ಯ ಅವರಿಗೆ ಹೇಳಲಾಗಿದ್ದು, ಅವರು ಒಪ್ಪಿಕೊಂಡಿದ್ದಾರೆ ಎಂದು ಹೇಳಿದರು.
ಈ ಸಂಬಂಧ ಹೈಕಮಾಂಡ್ ಮನವೊಲಿಸುವುದಾಗಿ ಸಿದ್ದರಾಮಯ್ಯ ಪಕ್ಷದ ಮುಖಂಡರಿಗೆ ತಿಳಿಸಿದ್ದಾರೆ. ಬಾದಾಮಿಯಿಂದ ಸ್ಪರ್ಧಿಸಲು ಪಕ್ಷದ ನಾಯಕರೊಂದಿಗೆ ಸಿದ್ದರಾಮಯ್ಯ ಸರಣಿ ಸಭೆ ನಡೆಸುತ್ತಿದ್ದು, ಅವರ ಗೆಲುವಿಗೆ ಶ್ರಮಿಸುವುದಾಗಿ ಹಾಲಿ ಶಾಸಕ ಬಿ. ಬಿ. ಚಿಮ್ಮನಕಟ್ಟಿ ಮತ್ತಿತರ ನಾಯಕರು ಭರವಸೆ ನೀಡಿದ್ದಾರೆ.
ಕಾಂಗ್ರೆಸ್ ನಾಯಕರ ಪ್ರಕಾರ, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಗೆಲ್ಲಲು ಕಷ್ಟವಾದರೆ, ಕುರುಬ ಮತ್ತು ಲಿಂಗಾಯಿತ ಮತದಾರರು ನಿರ್ಣಾಯಕವಾಗಿರುವ ಬಾದಾಮಿ ಕ್ಷೇತ್ರದಲ್ಲಿ ಸುಲಭವಾಗಿ ಗೆಲ್ಲಬಹುದಾಗಿದೆ. ಕಳೆದ ಬಾರಿಯ ಚುನಾವಣೆಯಲ್ಲಿ ಕುರುಬ ಸಮುದಾಯಕ್ಕೆ ಸೇರಿರುವ ಸಿದ್ದರಾಮಯ್ಯ ಅವರಿಗೆ ರಾಜ್ಯದಾದ್ಯಂತ ಆ ಸಮುದಾಯ ಬೆಂಬಲಿಸಿತ್ತು.
ಈ ಸಂದರ್ಭದಲ್ಲಿ ಲಿಂಗಾಯಿತರಿಗೆ ಅಲ್ಪಸಂಖ್ಯಾತ ಸ್ಥಾನಮಾನ ನೀಡುವ ಸಂಬಂಧ ಸಿದ್ದರಾಮಯ್ಯ ತಾಳಿರುವ ನಿಲುವಿನಿಂದ ಲಿಂಗಾಯಿತರು ಅವರನ್ನು ಬೆಂಬಲಿಸುವ ಸಾಧ್ಯತೆ ಇದೆ ಎಂದು ಹೇಳುತ್ತಾರೆ.
ಉತ್ತರ ಕರ್ನಾಟಕ ವಲಯದಿಂದ ಸಿದ್ದರಾಮಯ್ಯ ಸ್ಪರ್ಧಿಸುವಂತೆ ಆಹ್ವಾನ ನೀಡಿದ ನಂತರ ಈ ಭಾಗದ ಮುಖಂಡರು ತೀವ್ರರೀತಿಯಲ್ಲಿ ಚರ್ಚೆ ನಡೆಸಿದ್ದು, ಬಾದಾಮಿ ಕ್ಷೇತ್ರದಿಂದ ಸಿದ್ದರಾಮಯ್ಯ ಸ್ಪರ್ಧಿಸುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷದ ಶಾಸಕರು ಗೆಲುವು ಸಾಧಿಸಲು ಸಾಧ್ಯವಾಗುತ್ತದೆ ಎಂದು ಎಸ್. ಆರ್. ಪಾಟೀಲ್ ಅಭಿಪ್ರಾಯಪಟ್ಟಿದ್ದಾರೆ.