ಮೋದಿ ಸರ್ಕಾರದ ಅವಧಿಯಲ್ಲಿ ಮಹಿಳೆಯರು, ಮಕ್ಕಳ ಮೇಲಿನ ಅಪರಾಧ ಹೆಚ್ಚಳ- ಖರ್ಗೆ
ಪ್ರಧಾನಿ ನರೇಂದ್ರಮೋದಿ ಸರ್ಕಾರದ ಅವಧಿಯಲ್ಲಿ ಮಹಿಳೆಯರು ಮತ್ತು ಮಕ್ಕಳ ಮೇಲಿನ ಅಪರಾಧ ಪ್ರಕರಣಗಳು ಹೆಚ್ಚಾಗಿವೆ ಎಂದು ಲೋಕಸಭೆಯಲ್ಲಿನ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.
ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಸರ್ಕಾರದ ಅವಧಿಯಲ್ಲಿ ಮಹಿಳೆಯರು ಮತ್ತು ಮಕ್ಕಳ ಮೇಲಿನ ಅಪರಾಧ ಪ್ರಕರಣಗಳು ಹೆಚ್ಚಾಗಿವೆ ಎಂದು ಲೋಕಸಭೆಯಲ್ಲಿನ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪರಿಣಾಮಕಾರಿತ್ವದಲ್ಲಿ ಮೋದಿ ಸರ್ಕಾರ ಕಾರ್ಯನಿರ್ವಹಿಸುತ್ತಿಲ್ಲವಾದ್ದರಿಂದ ಮಹಿಳೆಯರು ಮತ್ತು ಮಕ್ಕಳ ಮೇಲಿನ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಟೀಕಿಸಿದರು.
ಮೋದಿ ಸರ್ಕಾರದ ಅವಧಿಯಲ್ಲಿ ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳು ಮಿತಿ ಮೀರಿವೆ.
ಉತ್ತರ ಪ್ರದೇಶ, ಗುಜರಾತ್ ಮೊದಲಾದ ಕಡೆಗಳಲ್ಲಿ ಇದು ಜಾಸ್ತಿಯಾಗಿದೆ. ಸುದ್ದಿಗೋಷ್ಠಿ ನಡೆಸುವ ಪ್ರಧಾನಿ ನರೇಂದ್ರಮೋದಿ ರಾಜ್ಯಸಭೆ ಅಥವಾ ಲೋಕಸಭೆಯಲ್ಲಿ ಉತ್ತರ ನೀಡುವುದಿಲ್ಲ. ಅವಿಶ್ವಾಸ ನಿಲುವಳಿ ಮಂಡನೆಗೂ ಅವಕಾಶ ನೀಡುವುದಿಲ್ಲ ಎಂದರು.
ನೋಟು ಅಮಾನ್ಯತೆಯಿಂದಾಗಿ ಬಡ, ಮಧ್ಯಮ ವರ್ಗದ ಜನರು ತೀವ್ರ ತೊಂದರೆ ಎದುರಿಸುವಂತಾಗಿದೆ. ನಗದು ಕೊರತೆಯಿಂದಾಗಿ ಸಣ್ಣ ವ್ಯಾಪಾರಿಗಳು ತೀವ್ರ ಆರ್ಥಿಕ ಸಂಕಷ್ಟಕ್ಕೀಡಾಗಿದ್ದಾರೆ.
ನೀರವ್ ಮೋದಿ ಸಾವಿರಾರು ಕೋಟಿ ರೂಪಾಯಿ ದೋಚಿ ವಿದೇಶಕ್ಕೆ ಪಲಾಯನ ಮಾಡಿದ್ದಾನೆ. ಆದರೆ, ಪ್ರಧಾನಿ ಮೋದಿ ಸಂಸತ್ತಿನಲ್ಲಿ ಯಾವುದೇ ಉತ್ತರ ನೀಡುತ್ತಿಲ್ಲ. ಇದರಲ್ಲಿ ಅವರೇನಾದರೂ ಶಾಮೀಲಾಗಿದ್ದಾರಾ ಎಂದು ಖರ್ಗೆ ಪ್ರಶ್ನಿಸಿದರು.