ಬೆಂಗಳೂರು: ಎಂತಹ ಕ್ಲಿಷ್ಟಕರ ಪರಿಸ್ಥಿತಿ ನಿರ್ಮಾಣವಾದಲೂ ಬಿಜೆಪಿ ಜೊತೆ ಸೇರಿ ಸಮ್ಮಿಶ್ರ ಸರ್ಕಾರ ರಚಿಸುವುದಿಲ್ಲ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಅವರು ಸೋಮವಾರ ಸ್ಪಷ್ಟಪಡಿಸಿದ್ದಾರೆ.
ಬಿಜೆಪಿ ಆಡಳಿತವಧಿಯಲ್ಲಿ ಕರ್ನಾಟಕ ಅಗಾಧವಾದ ನಷ್ಟ ಅನುಭವಿಸಿದೆ. ಹೀಗಾಗಿ ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರುವಂತಹ ತಪ್ಪು ಕೆಲಸ ಮಾಡುವುದಿಲ್ಲ ಎಂದು ಎಎನ್ಐಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಮಾಜಿ ಪ್ರಧಾನಿ ತಿಳಿಸಿದ್ದಾರೆ. ಅಲ್ಲದೆ ಕಾಂಗ್ರೆಸ್ ಜೊತೆಯೂ ಕೈಜೋಡಿಸುವುದಿಲ್ಲ ಎಂದಿದ್ದಾರೆ.
ಯಾವುದೇ ಪರಿಸ್ಥಿತಿಯಲ್ಲೂ ಜೆಡಿಎಸ್ ಬಿಜೆಪಿ ಜೊತೆ ಸೇರಿ ಸರ್ಕಾರ ರಚಿಸುವುದಿಲ್ಲ. ಈ ಹಿಂದೆ ಬಿಜೆಪಿಯ ಐದು ವರ್ಷಗಳ ಅವಧಿಯಲ್ಲಿ ಮೂವರು ಮುಖ್ಯಮಂತ್ರಿಗಳಾದರು. ಇದು ಬಿಜೆಪಿಯ ದೊಡ್ಡ ಕೊಡುಗೆ ಮತ್ತು ಬಿಜೆಪಿ ಅವಧಿಯಲ್ಲಿ ಯಾರು ಜೈಲಿಗೆ ಹೋದರು ಎಂಬುದನ್ನು ನಾನು ಹೇಳುವುದಿಲ್ಲ ಎಂದು ಜೆಡಿಎಸ್ ವರಿಷ್ಠ ದೇವೇಗೌಡ ಹೇಳಿದ್ದಾರೆ.
ಕಾಂಗ್ರೆಸ್ ನ ಸಿದ್ದರಾಮಯ್ಯ ಮತ್ತು ಬಿಜೆಪಿಯ ಬಿಎಸ್ ಯಡಿಯೂರಪ್ಪ ಅವರಿಗಿಂತ ಉತ್ತಮ ಆಡಳಿತ ನೀಡಲು ಕುಮಾರಸ್ವಾಮಿಯಿಂದ ಮಾತ್ರ ಸಾಧ್ಯ. ಆದರೆ ಈ ಬಗ್ಗೆ ಜನ ತೀರ್ಮಾನ ಮಾಡಲಿದ್ದಾರೆ ಎಂದು ದೇವೇಗೌಡರು ತಿಳಿಸಿದ್ದಾರೆ.
ಬಹುತೇಕ ಮತದಾನ ಪೂರ್ವ ಸಮೀಕ್ಷೆಗಳು ಈ ಬಾರಿ ಅತಂತ್ರ ವಿಧಾನಸಭೆ ನಿರ್ಮಾಣವಾಗಲಿದೆ ಎಂದು ಹೇಳಿದ್ದು, ಜೆಡಿಎಸ್ ಕಿಂಗ್ ಮೇಕರ್ ಆಗಲಿದೆ ಎನ್ನಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics