ಬೆಳಗಾವಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು, ಪ್ರತಿಪಕ್ಷದ ನಾಯಕನಿಂದ ನನಗೆ ಯಾವುದೇ ಸರ್ಟಿಫಿಕೇಟ್ ಬೇಕಾಗಿಲ್ಲ ಎಂದು ಸೋಮವಾರ ಹೇಳಿದ್ದಾರೆ.
ಮುಖ್ಯಮಂತ್ರಿ ಅಹಂಕಾರದಿಂದ ವರ್ತಿಸುತ್ತಿದ್ದಾರೆ, ಸಿಎಂ ಮತ್ತು ಸರ್ಕಾರದ ವಿರುದ್ಧ ಬಿಜೆಪಿ ಸದನದ ಹೊರಗೆ ಮತ್ತು ಒಳಗೆ ಹೋರಾಟ ನಡೆಸಲಿದೆ ಎಂದು ಬಿಎಸ್ ಯಡಿಯೂರಪ್ಪ ಅವರು ಹೇಳಿದ್ದರು.
ಇಂದು ಬೆಳಗಾವಿಯಲ್ಲಿ ಬಿಎಸ್ ವೈ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ, ಅವರ ಹೇಳಿಕೆಗೆ ನಾನು ಪ್ರತಿಕ್ರಿಯಿಸುವುದಿಲ್ಲ. ಯಡಿಯೂರಪ್ಪ ಅವರ ಪ್ರಮಾಣಪತ್ರ ನನಗೆ ಬೇಕಿಲ್ಲ. ಜನರೇ ಈ ಬಗ್ಗೆ ನಿರ್ಧರಿಸುತ್ತಾರೆ. ರಾಜ್ಯದ ಹಿತಕ್ಕೆ ಸಂಬಂಧಿಸಿದ ವಿಷಯಗಳಿದ್ದರೆ ಮಾತ್ರ ಯಡಿಯೂರಪ್ಪ ಅವರ ಮಾತುಗಳಿಗೆ ಪ್ರತಿಕ್ರಿಯೆ ನೀಡುತ್ತೇನೆ ಎಂದಿದ್ದಾರೆ.
ಇದೇ ವೇಳೆ ಬಿಜೆಪಿ ಪ್ರತಿಭಟನೆ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಪ್ರತಿಭಟನೆ ಮಾಡುವುದೇ ಅವರ ಕೆಲಸ. ಆದರೆ ಅಧಿವೇಶನ ಸುಗಮವಾಗಿ ನಡೆಯಬೇಕೆಂಬುದು ನಮ್ಮ ಆಶಯ. ಇದಕ್ಕಾಗಿ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿದ್ದೇವೆ ಎಂದರು.