ರಾಜಕೀಯ

2019 ಲೋಕಸಭಾ ಚುನಾವಣೆಗೆ ಸಿದ್ಧತೆ ಆರಂಭಿಸಿದ ಬಿಜೆಪಿ

Nagaraja AB

ಬೆಂಗಳೂರು:  ವಿಧಾನಸಭಾ ಚುನಾವಣೆಯಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೂ  ಅಧಿಕಾರ ಹಿಡಿಯುವಲ್ಲಿ ವಿಫಲವಾಗಿರುವ ಬಿಜೆಪಿ ಮುಂಬರುವ ಲೋಕಸಭಾ ಚುನಾವಣೆಗೆ ಸಿದ್ಧತಾ ಕಾರ್ಯಗಳನ್ನು ಈಗಾಗ್ಗಲೇ ಆರಂಭಿಸಿದೆ. ರಾಜ್ಯಮಟ್ಟದ ನಾಯಕರು ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ನಾಯಕರೊಂದಿಗೆ ಸಮಾಲೋಚನೆ ನಡೆಸುತ್ತಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ  ಹಾಗೂ ಮತ್ತಿತರ ಹಿರಿಯ ನಾಯಕರು ಬೆಂಗಳೂರಿನಲ್ಲಿ ನಿನ್ನೆ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ಪಕ್ಷದ ನಾಯಕರೊಂದಿಗೆ ಸಮಾಲೋಚನೆ ನಡೆಸಿದರು.

ಮುಂದಿನ ದಿನಗಳಲ್ಲಿ ಎಲ್ಲಾ  ಲೋಕಸಭಾ ವ್ಯಾಪ್ತಿಯಲ್ಲಿನ ನಾಯಕರೊಂದಿಗೆ ಪ್ರತ್ಯೇಕವಾಗಿ ಸಮಾಲೋಚನೆ ನಡೆಸಲಾಗುವುದು, ಸಭೆ ನಡೆಸುವ ಮೂಲಕ ಪ್ರತಿಕ್ರಿಯೆ ಪಡೆದು ಅಡೆತಡೆ ನಿವಾರಿಸಲಾಗುವುದು, 2019ರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆ ಇದರ ಪ್ರಮುಖ ಉದ್ದೇಶವಾಗಿದೆ ಎಂದು ಪಕ್ಷದ ನಾಯಕರು ತಿಳಿಸಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬೆಂಗಳೂರು ನಗರದಲ್ಲಿ ಪಕ್ಷದ ಸಾಧನೆ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. 2014ರ ಚುನಾವಣೆ ಸಂದರ್ಭದಲ್ಲಿ ಮೂರು ಲೋಕಸಭಾ ಕ್ಷೇತ್ರಗಳಲ್ಲಿಯೂ ಗೆಲುವು ಸಾಧಿಸಿದ್ದರೂ ವಿಧಾನಸಭಾ ಚುನಾವಣೆಯಲ್ಲಿ ಕಳಪೆ ಪ್ರದರ್ಶನ ಕಂಡುಬಂದಿದ್ದ ಬಗ್ಗೆ ನಾಯಕರು ಚರ್ಚಿಸಿದ್ದು, ಮುಂದಿನ ಇಂತಹ ದೋಷಗಳಾಗದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ನಾಯಕರು ಸೂಚಿಸಿದ್ದಾರೆ ಎಂದು ಅವರು ಹೇಳಿದರು.

ರಾಮಲಿಂಗಾರೆಡ್ಡಿ ಸೇರಿದಂತೆ ಕಾಂಗ್ರೆಸ್ ಪಕ್ಷದ ಹಲವು ನಾಯಕರು ಸಚಿವ ಸ್ಥಾನ ಸಿಗದೆ ಪಕ್ಷದ ನಾಯಕರ ವಿರುದ್ಧ ಅಸಮಾಧಾನಗೊಂಡಿದ್ದು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಮೇಲೆ ಪರಿಣಾಮ ಬೀರುವ ಸಾಧ್ಯತೆಯೂ ಬಗ್ಗೆಯೂ ಚರ್ಚೆ ನಡೆಸಲಾಗಿದೆ ಎಂಬುದು ತಿಳಿದುಬಂದಿದೆ.

SCROLL FOR NEXT