ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ
ಬೆಂಗಳೂರು: ನಂ.1 ರಾಜ್ಯಕ್ಕೆ ಆಗಮಿಸುತ್ತಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಸುಸ್ವಾಗತ ಎಂದು ಟ್ವೀಟ್ ಮಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಟ್ವಿಟ್ಟರ್ ಮೂಲಕವೇ ಭಾನುವಾರ ತಿರುಗೇಟು ನೀಡಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಸ್ವಾಗತ ಕೋರಿದ್ದಕ್ಕೆ ಧನ್ಯವಾದಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ... ಹೌದು, ಕರ್ನಾಟಕ ಮೊದಲ ಸ್ಥಾನದಲ್ಲಿದೆ. ಯಾವುದರಲ್ಲಿ ಎಂದರೆ, ಭ್ರಷ್ಟಾಚಾರದಲ್ಲಿ ಎಂದು ಕಾಲೆಳೆದಿದ್ದಾರೆ.
ರಾಜ್ಯದಲ್ಲಿ 3500 ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ, ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ನಾಶಗೊಂಡಿದೆ. ಅಧಿಕಾರಿಗಳು ನಿಗೂಢವಾಗಿ ಸಾವನ್ನಪ್ಪುತ್ತಿದ್ದಾರೆ. ಪ್ರಾಮಾಣಿಕ, ದಕ್ಷ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗುತ್ತಿದೆ ಎಂದು ಸಿದ್ದರಾಮಯ್ಯ ಅವರ ವಿರುದ್ಧ ಕಿಡಿಕಾರಿದ್ದಾರೆ.
ಈ ಹಿಂದೆ ಟ್ವೀಟ್ ಮಾಡಿದ್ದ ಸಿದ್ದರಾಮಯ್ಯ ಅವರು, ನಮ್ಮ ಕರ್ನಾಟಕ್ಕೆ ಆಗಮಿಸುತ್ತಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಸ್ವಾಗತ. ಹಲವು ಕ್ಷೇತ್ರಗಳಲ್ಲಿ ಮೊದಲ ಸ್ಥಾನದಲ್ಲಿರುವ ಕರ್ನಾಟಕಕ , ಅಭಿವೃದ್ಧಿ, ಹೂಡಿಕೆ, ಆವಿಷ್ಕಾರದಲ್ಲಿ ದೇಶಕ್ಕೆ ಮಾದರಿಯಾಗಿದೆ. ರಾಜ್ಯದ ಯಶಸ್ಸು ಇಡೀ ದೇಶವನ್ನೇ ಹೆಮ್ಮೆ ಪಡುವಂತೆ ಮಾಡುತ್ತಿದೆ ಎಂದು ಹೇಳಿದ್ದರು.