ಬೆಂಗಳೂರು: ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿರುವ ಹಿನ್ನಲೆಯಲ್ಲಿ ಮತ ವಿಭಜನೆ ಮಾಡುವ ಸಲುವಾಗಿ ಬಿಜೆಪಿಯು ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಜೊತೆಗೆ ಒಳ ಒಪ್ಪಂದ ಮಾಡಿಕೊಂಡಿದೆ ಎಂದು ಗೃಹ ಸಚಿವ ರಾಮಲಿಂಗಾ ರೆಡ್ಡಿಯವರು ಸೋಮವಾರ ಆರೋಪ ಮಾಡಿದ್ದಾರೆ.
ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಹೈದರಾಬಾದ್ ನಲ್ಲಿ ಬಿಜೆಪಿ ನಾಯಕರು ಓವೈಸಿ ಜೊತೆಗೆ ಗುಪ್ತ ಸಭೆ ನಡೆಸಿದ್ದಾರೆ. ಎಐಎಂಐಎಂ ಪಕ್ಷದೊಂದಿಗೆ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕೈ ಜೋಡಿಸಲು ಮುಂದಾಗಿದ್ದಾರೆ. ಚುನಾವಣೆ ಹೊಂದಾಣಿಕೆ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಿದ್ದಾರೆಂದು ನಮಗೆ ಮಾಹಿತಿ ಸಹ ಬಂದಿದೆ. ಕರ್ನಾಟಕದಲ್ಲಿ ಪಿಎಫ್ಐ, ಎಸ್'ಡಿಪಿಐ ಜೊತೆಗೆ ಬಿಜೆಪಿ ಹೊಂದಾಣಿಕೆ ಮಾಡಿಕೊಂಡಿಹುವ ಬಗ್ಗೆ ದಾಖಲೆಗಳನ್ನು ಶೀಘ್ರದಲ್ಲಿಯೇ ಬಿಡುಗಡೆ ಮಾಡುತ್ತೇನೆಂದು ಹೇಳಿದ್ದಾರೆ.
ಅಧಿಕಾರಕ್ಕಾಗಿ ಬಿಜೆಪಿಯವರು ಯಾವ ಮಾರ್ಗ ಬೇಕಾದರೂ ಹಿಡಿಯುತ್ತಾರೆ. ಇದು ಬಿಜೆಪಿಗೆ ಹೊಸದೇನೂ ಅಲ್ಲ. ಉತ್ತರಪ್ರದೇಶ, ಮಹಾರಾಷ್ಟ್ರ ರಾಜ್ಯಗಳಲ್ಲೂ ಹೀಗೆ ಮಾಡಿ ಅಧಿಕಾರಕ್ಕೆ ಬಂದಿದ್ದಾರೆ. ಕರ್ನಾಟಕದಲ್ಲೂ ಅದೇ ತಂತ್ರವನ್ನು ಅನುಸರಿಸುತ್ತಿದ್ದಾರೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಎಐಎಂಐಎಂ ರಾಜ್ಯಾಧ್ಯಕ್ಷ ಉಸ್ಮಾನ್ ಘಾನಿ ಮಾತನಾಡಿ, ಮುಸ್ಲಿಮರು ಕಾಂಗ್ರೆಸ್ ಪಕ್ಷದ ಜೀತದಾಳುಗಳಲ್ಲ. ತಮ್ಮ ವೋಟ್ ಬ್ಯಾಂಕ್ ಗಾಗಿ ಕಳೆದ 70 ವರ್ಷಗಳಿಂದ ಮುಸ್ಲಿಮರನ್ನು ಕಾಂಗ್ರೆಸ್ ದುರ್ಬಳಕೆ ಮಾಡಿಕೊಂಡಿದೆ. ಮುಸ್ಲಿಮರ ಕಲ್ಯಾಣಕ್ಕಾಗಿ ಏನನ್ನೂ ಮಾಡಿಲ್ಲ. ರಾಜ್ಯದಲ್ಲಿ ಶೇ.13 ರಷ್ಟು ಮುಸ್ಲಿಮರಿದ್ದಾರೆ. ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಎಐಎಂಐಎಂ ಸ್ಪರ್ಧಿಸುತ್ತಿರುವುದರ ಕುರಿತಂತೆ ಕಾಂಗ್ರೆಸ್ ಚಿಂತನೆ ನಡೆಸುತ್ತಿದೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics