ರಾಜಕೀಯ

ಜೆಡಿಎಸ್ ನೊಂದಿಗೆ ಮೈತ್ರಿ ಕಾಂಗ್ರೆಸ್ ಗೆ ಮುಳುವು?

Sumana Upadhyaya

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಳ್ಳಲು ಹೊರಟಿರುವುದು ಹಳೆ ಮೈಸೂರು ಭಾಗದ ಕಾಂಗ್ರೆಸ್ ಕಾರ್ಯಕರ್ತರಿಗೆ ಮತ್ತು ಉತ್ತರ ಕರ್ನಾಟಕ ಭಾಗದ ಕಾಂಗ್ರೆಸ್ ನಾಯಕರಿಗೆ ನಿದ್ದೆಗೆಡುವಂತೆ ಮಾಡಿದೆ.

ದಕ್ಷಿಣ ಕರ್ನಾಟಕದಲ್ಲಿ ಜೆಡಿಎಸ್ ಜಾತಿ ಮತ್ತು ಮತ ಏಕೀಕರಣ ಹೊಂದಿದ್ದರೆ, ಕಾಂಗ್ರೆಸ್ ಪ್ರಭಾವ ಕುಸಿಯುತ್ತಿದೆ. ಇನ್ನು ಉತ್ತರ ಕರ್ನಾಟಕಕ್ಕೆ ಸಮ್ಮಿಶ್ರ ಸರ್ಕಾರ ಪಕ್ಷಪಾತ ತೋರುತ್ತಿದೆ ಎಂಬ ಜನರಲ್ಲಿರುವ ಗ್ರಹಿಕೆ ಈ ಭಾಗದಲ್ಲಿ ಕಾಂಗ್ರೆಸ್ ಗೆ  ಮುಳುವಾಗುವ ಸಾಧ್ಯತೆಯಿದೆ. ಪಕ್ಷ ಈ ಬಗ್ಗೆ ತುರ್ತು ಕ್ರಮ ಕೈಗೊಂಡು ಜನರ ವಿಶ್ವಾಸ ಗಳಿಸದಿದ್ದರೆ ಕಾಂಗ್ರೆಸ್ ಗೆ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಹುದೊಡ್ಡ ಹೊಡೆತ ಬೀಳಲಿದೆ ಎನ್ನುತ್ತಾರೆ ಕಾಂಗ್ರೆಸ್ ನಾಯಕರು.

ಕಾಂಗ್ರೆಸ್ ಗೆ ಮೈಸೂರು, ಮಂಡ್ಯ, ಬೆಂಗಳೂರು ಗ್ರಾಮಾಂತರ, ಹಾಸನ, ಚಾಮರಾಜನಗರ, ತುಮಕೂರು ಮತ್ತು ರಾಮನಗರ ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲಿ ಬಹಳ ಕಷ್ಟವಿದೆ. ಈ ಭಾಗಗಳಲ್ಲಿ ಜೆಡಿಎಸ್ ಪ್ರಬಲವಾಗಿದೆ ಮತ್ತು ಈ ಭಾಗದ ಒಕ್ಕಲಿಗ ಸಮುದಾಯ ಜೆಡಿಎಸ್ ನ್ನು ಕೈಬಿಡುವ ಸಾಧ್ಯತೆ ಕಡಿಮೆ. ಇಂತಹ ಸಂದರ್ಭದಲ್ಲಿ ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಂಡು ಸ್ಥಾನ ಬಿಟ್ಟುಕೊಟ್ಟರೆ ನಮ್ಮ ಮತದಾರರನ್ನು ಅವರಿಗೆ ಬಿಟ್ಟುಕೊಟ್ಟಂತಾಗುತ್ತದೆ, ನಮಗೆ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವುದು ಸುತಾರಾಂ ಇಷ್ಟವಿಲ್ಲ ಎನ್ನುತ್ತಾರೆ ಹಳೆ ಮೈಸೂರು ಭಾಗದ ಕಾಂಗ್ರೆಸ್ ಜಿಲ್ಲಾ ಘಟಕದ ಪದಾಧಿಕಾರಿಯೊಬ್ಬರು.

ನಗರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುವುದು ಕೂಡ ಕಾಂಗ್ರೆಸ್ ಗೆ ತೀವ್ರ ಹೊಡೆತ, ಇದರಿಂದ ಪಕ್ಷದ ರಚನೆಗೆ ಧಕ್ಕೆಯುಂಟಾಗಲಿದೆ ಎಂದು ಕಾಂಗ್ರೆಸ್ ಕಾರ್ಯಕರ್ತೆಯೊಬ್ಬರು ಹೇಳುತ್ತಾರೆ.

ಮೈತ್ರಿ ಸರ್ಕಾರ ಅಸ್ಥಿತ್ವಕ್ಕೆ ಬಂದ ನಂತರ ಮತ್ತು ಮುಖ್ಯಮಂತ್ರಿ ಕುಮಾರಸ್ವಾಮಿಯವರ ಹೇಳಿಕೆಯಿಂದ ಉತ್ತರ ಕರ್ನಾಟಕ ಭಾಗದಲ್ಲಿ ಕಾಂಗ್ರೆಸ್ ಬಗ್ಗೆ ಜನರಿಗೆ ಒಳ್ಳೆಯ ಅಭಿಪ್ರಾಯವಿಲ್ಲ. ಪ್ರತ್ಯೇಕ ರಾಜ್ಯ ರಚನೆಗೆ ಒತ್ತಾಯಿಸಿ ಆಗಸ್ಟ್ 2ರಂದು ಬಂದ್ ಗೆ ಕರೆ ನೀಡಲಾಗಿದೆ. ಸಚಿವ ಸಂಪುಟದಲ್ಲಿ ಈ ಭಾಗದ ಶಾಸಕರಿಗೆ ಸೂಕ್ತ ಪ್ರಾತಿನಿಧ್ಯ ಸಿಗದಿರುವುದು, ಒಕ್ಕಲಿಗ ಮತ್ತು ದಕ್ಷಿಣ ಕರ್ನಾಟಕ ಭಾಗದ ಜನಪ್ರಿತಿನಿಧಿಗಳಿಗೆ ಹೆಚ್ಚಿನ ಆದ್ಯತೆ ನೀಡಿರುವುದು, ಕುಮಾರಸ್ವಾಮಿಯವರ ಬಜೆಟ್ ಇವೆಲ್ಲವೂ 16 ಜಿಲ್ಲೆಗಳ ಜನರಲ್ಲಿ ಮತ್ತು ಕಾಂಗ್ರೆಸ್ ಕಾರ್ಯಕರ್ತರಿಗೆ ಸರಿಯಾಗಿ ಕಾಣಿಸಿಲ್ಲ ಎನ್ನಲಾಗಿದೆ.

SCROLL FOR NEXT