ಕಲಬುರ್ಗಿ: 2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್–ಜೆಡಿಎಸ್ ಮೈತ್ರಿ ಖಚಿತ ಎಂದು ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ಅವರು ಹೇಳಿದ್ದಾರೆ.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಖರ್ಗೆ, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್–ಜೆಡಿಎಸ್ ಒಗ್ಗೂಡಿ ಚುನಾವಣೆ ಎದುರಿಸುವ ಬಗ್ಗೆ ಈಗಾಗಲೇ ಚರ್ಚೆ ನಡೆದಿದೆ. ಈ ಕುರಿತು ಇನ್ನಷ್ಟು ಚರ್ಚಿಸಲಾಗುವುದು. ಬಿಜೆಪಿ ಮತ್ತು ಆರ್‌ಎಸ್‌ಎಸ್ ಸಮಾಜ ವಿಭಜನೆ ಕೆಲಸ ಮಾಡುತ್ತಿವೆ. ಹೀಗಾಗಿ ಜಾತ್ಯತೀತ ತತ್ವ ಎತ್ತಿ ಹಿಡಿಯಲು, ಪ್ರಜಾಪ್ರಭುತ್ವ ಉಳಿಸಲು ಮತ್ತು ಸಂವಿಧಾನ ರಕ್ಷಿಸಲು ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳಲಾಗುವುದು ಎಂದರು.
ಇದೇ ವೇಳೆ ಸಚಿವ ಸ್ಥಾನ ವಂಚಿತರ ಭಿನ್ನಮತ ಶಮನ ಮಾಡಲಾಗುವುದು ಎಂದ ಖರ್ಗೆ, ಸಚಿವ ಸ್ಥಾನ ಹಂಚಿಕೆ ವೇಳೆ ಅಸಮಾಧಾನ ಇದ್ದೇ ಇರುತ್ತದೆ. ಅದನ್ನು ಹೈಕಮಾಂಡ್ ಶಮನಗೊಳಿಸುತ್ತದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಪಕ್ಷಕ್ಕಾಗಿ ಅನೇಕರು ದುಡಿದಿದ್ದಾರೆ. 3–4 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಹೀಗಾಗಿ ಮಂತ್ರಿ ಆಗಬೇಕು ಎಂದು ಬಯಸುವುದು ಸಹಜ. ಹೈಕಮಾಂಡ್ ಪ್ರತಿನಿಧಿಯಾಗಿ ಕಾಂಗ್ರೆಸ್‌ನ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ ಅವರು ಸರಿಪಡಿಸುವ ಕೆಲಸವನ್ನು ಮಾಡುತ್ತಿದ್ದಾರೆ. ಹೀಗಾಗಿ ಭಿನ್ನಾಭಿಪ್ರಾಯಕ್ಕೆ ಯಾರೂ ತುಪ್ಪ ಸುರಿಯುವ ಕೆಲಸ ಮಾಡಬಾರದು ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics