ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ
ಬೆಂಗಳೂರು: ನಾಡಿನ ನೆಲ, ಜಲ ಮತ್ತು ಭಾಷಣೆ ವಿಚಾರದಲ್ಲಿ ರಾಜಕೀಯ ಮಾಡುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಶನಿವಾರ ಹೇಳಿದ್ದಾರೆ.
ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಸ್ಥಾಪನೆ ಮಾಡಿರುವ ನಿರ್ವಹಣಾ ಮಂಡಳಿ ರಚನೆ ಸಂಬಂಧ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಇಂದು ಸರ್ವಪಕ್ಷ ಸಭೆ ನಡೆಸುತ್ತಿದ್ದು, ಸಭೆಯಲ್ಲಿ ಭಾಗಿಯಾಗುವುದಕ್ಕೂ ಮುನ್ನ ಪ್ರತಿಕ್ರಿಯೆ ನೀಡಿರುವ ಅವರು, ಕಾವೇರಿ ವಿಚಾರದಲ್ಲಿ ಯಾವುದೇ ರೀತಿಯ ರಾಜಕೀಯ ಮಾಡುವುದಿಲ್ಲ. ಕಾವೇರಿ ವಿಚಾರದಲ್ಲಿ ಎಲ್ಲರೂ ಚರ್ಚೆ ನಡೆಸಿ, ಒಮ್ಮತ ನಿರ್ಧಾರಕ್ಕೆ ಬರುತ್ತೇವೆಂದು ಹೇಳಿದ್ದಾರೆ.
ಕಾವೇರಿ ವಿಚಾರ ಸಂಬಂಧ ರಾಜ್ಯ ಬಿಜೆಪಿ ನಾಯಕರು ಸರ್ಕಾರದ ಪರ ಇದೆ. ಸರ್ಕಾರದ ತೀರ್ಮಾನಕ್ಕೆ ಬದ್ಧರಾಗಿದ್ದೇವೆ. ಇಲ್ಲಿ ರಾಜಕೀಯ ಮಾಡುವ ಪ್ರಶ್ನೆಯೇ ಇಲ್ಲ. ರಾಜ್ಯದ ಹಿತಾಸಕ್ತಿಗನುಗುಣವಾಗಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.
ಕಾವೇರಿ ವಿವಾದ ಸಂಬಂಧ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸರ್ವಪಕ್ಷ ಸಭೆ ನಡೆಯುತ್ತಿದೆ. ವಿವಿಧ ಪಕ್ಷಗಳ ಮುಖಂಡರ ಜೊತೆಗೆ ಕಾವೇರಿ ಕಣಿವೆಯ ಜನಪ್ರತಿನಿಧಿಗಳೂ ಸರ್ವಪಕ್ಷ ಸಭೆಯಲ್ಲಿ ಪಾಲ್ಗೊಂಡಿದ್ದಾರೆ.
ಕೇಂದ್ರ ಸರ್ಕಾರ ಇತ್ತೀಚೆಗಷ್ಟೇ ರಚನೆ ಮಾಡಿರುವ ಕಾವೇರ ಜಲ ನಿರ್ವಹಣಾ ಪ್ರಾಧಿಕಾರ ಮತ್ತು ಕಾವೇರಿ ನೀರು ನಿಯಂತ್ರಣ ಸಮಿತಿಯಿಂದಾಗಿ ಕಾವೇರಿ ನದಿ ನೀರಿನ ಅವಲಂಬಿತ ರೈತರಿಗೆ ಸಮಸ್ಯೆಯಾಗಲಿದೆ. ಈ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರದ ಈ ನಿರ್ಧಾರದ ವಿರುದ್ಧ ಯಾವ ರೀತಿ ಕಾನೂನು ಹೋರಾಟ ನಡೆಸಬೇಕು ಎಂಬುದರ ಬಗ್ಗೆ ಸರ್ವ ಪಕ್ಷ ಸದಸ್ಯರ ಸಭೆಯಲ್ಲಿ ಚರ್ಚೆ ನಡೆಯಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics