ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಕಾಂಗ್ರೆಸ್ ಮುಖಂಡರು ತಮ್ಮನ್ನು ಪದೇ ಪದೇ ಜೈಲು ಹಕ್ಕಿ ಎಂದು ಸಾರ್ವಜನಿಕ ಸಮಾವೇಶ ಹಾಗೂ ಮಾಧ್ಯಮಗಳ ಮುಂದೆ ಸಂಬೋಧಿಸುವುದರ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಇತರೆ ಕಾಂಗ್ರೆಸ್ ಮುಖಂಡರು ತಮ್ಮನ್ನು ಜೈಲಿ ಹಕ್ಕಿ ಮತ್ತು ಜೈಲಿಗೆ ಹೋದವರು ಎಂದು ಕರೆಯುವುದನ್ನು ನಿರ್ಬಂಧಿಸುವ ನಿಟ್ಟಿನಲ್ಲಿ ಅಗತ್ಯ ನಿರ್ದೇಶನ ನೀಡುವಂತೆ ಕೋರಿ ಬಿಎಸ್ ವೈ ಹೈಕೋರ್ಟ್ ಗೆ ತಕರಾರು ಅರ್ಜಿ ಸಲ್ಲಿಸಿದ್ದಾರೆ. ಅಲ್ಲದೆ, ಕಾಂಗ್ರೆಸ್ ನಾಯಕರು ತಮ್ಮ ವಿರುದ್ಧ ಮಾಡುವ ಅವಹೇಳನಕಾರಿ ಹೇಳಿಕೆಗಳನ್ನು ಪ್ರಸಾರ ಮಾಡದಿರುವ ಮುದ್ರಣ ಹಾಗೂ ವಿದ್ಯುನ್ಮಾನ ಮಾಧ್ಯಮಗಳಿಗೆ ನಿರ್ಬಂಧ ಹೇರುವಂತೆ ಅರ್ಜಿಯಲ್ಲಿ ಮನವಿ ಮಾಡಿಕೊಂಡಿದ್ದಾರೆಂದು ತಿಳಿದುಬಂದಿದೆ.
ಅರ್ಜಿಯಲ್ಲಿ ಕನ್ನಡದ 8 ದಿನ ಪತ್ರಿಕೆಗಳು, ನಾಲ್ಕು ಇಂಗ್ಲೀಷ್ ಪತ್ರಿಕೆಗಳು, 9 ರಾಜ್ಯ ಮತ್ತು ರಾಷ್ಟ್ರೀಯ ಸುದ್ದಿ ವಾಹಿನಗಿಳನ್ನು ಪ್ರತಿವಾದಿ ಮಾಡಲಾಗಿದೆ. ಹಾಗೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಸಚಿವರಾದ ಎಂ.ಬಿ.ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ವಿಧಾನಪರಿಶಷತ್ ಸದಸ್ಯ ವಿ.ಎಸ್ ಉಗ್ರಪ್ಪ, ಮಾಜಿ ಸಚಿವ ಸಿ.ಎಂ. ಇಬ್ರಾಹಿಂ, ಕಾಂಗ್ರೆಸ್ ಪಕ್ಷದ ವಕ್ತಾರ ಬ್ರಿಜೇಶ್ ಕಾಳಪ್ಪ ಅವರನ್ನು ಪ್ರತಿವಾದಿ ಮಾಡಿದ್ದಾರೆ.
ಯಡಿಯೂರಪ್ಪ ಅವರು ಸಲ್ಲಿಸಿರುವ ಈ ಅರ್ಜಿಯನ್ನು ನಿನ್ನೆ ವಿಚಾರಣೆ ನಡೆಸಿರುವ ನ್ಯಾಯಮೂರ್ತಿ ಜಿ.ನರೇಂದರ್ ಅವರಿದ್ದ ಏಕಸದಸ್ಯ ಪೀಠವು ಅರ್ಜಿದಾರರು ಎತ್ತಿರುವ ವಿಚಾರ ಸಾರ್ವಜನಿಕವಾಗಿ ಅತ್ಯಂತ ಮಹತ್ವದ್ದಾಗಿದೆ. ಹೀಗಾಗಿ ಈ ಬಗ್ಗೆ ವಿವರ ವಾದ ವಿಚಾರಣೆ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟ ನ್ಯಾಯಮೂರ್ತಿಗಳು, ಅರ್ಜಿ ಕುರಿತು ಪ್ರೆಸ್ ಕೌನ್ಸಿಲ್ ಮತ್ತು ಬ್ರಾಡ್'ಕಾಸ್ಟಿಂಗ್ ಕಾರ್ಪೋರೇಷನ್ ಆಫ್ ಇಂಡಿಯಾವನ್ನು ಅರ್ಜಿಯಲ್ಲಿ ಪ್ರತಿವಾದಿಯನ್ನಾಗಿಸಿ, ನೋಟಿಸ್ ಜಾರಿಗೆ ಆದೇಶಿಸಿ ವಿಚಾರಣೆಯನ್ನು ಮಾ.26ಕ್ಕೆ ಮುಂದೂಡಿದರು.
ವಿಚಾರಣೆ ವೇಳೆ ಯಡಿಯೂರಪ್ಪ ಅವರ ಪರ ವಕೀಲ ಸಿ.ವಿ.ನಾಗೇಶ್, ಅರ್ಜಿದಾರರನ್ನು ಕೆಲವು ಪ್ರಕರಣಗಳಲ್ಲಿ ನ್ಯಾಯಾಲಯ ಆರೋಪ ಮುಕ್ತಗೊಳಿಸಿದೆ. ಈ ತೀರ್ಪು ಪ್ರಶ್ನಿಸಿ ಸಲ್ಲಿಸಿರುವ ಮೇಲ್ವನವಿ ಉನ್ನತ ನ್ಯಾಯಾಲಯಗಳಲ್ಲಿ ಬಾಕಿ ಇದೆ. ನ್ಯಾಯಾಲಯದಿಂದ ಅಪರಾಧಿ ಎಂದು ಪರಿಗಣಿಸಲ್ಪಟ್ಟು ಜೈಲು ಶಿಕ್ಷೆಗೆ ಹೋಗುವುದಕ್ಕೂ ಮತ್ತು ನ್ಯಾಯಾಂಗ ಬಂಧನಕ್ಕೂ ವ್ಯತ್ಯಾಸವಿದೆ. ಆದರೆ ಸಭೆ ಸಮಾರಂಭಗಳಲ್ಲಿ ಕಾಂಗ್ರೆಸ್ಸಿಗರು ಯಡಿಯೂರಪ್ಪ ವಿರುದ್ಧ ಟೀಕೆ ಮಾಡುವ ಮೂಲಕ ನ್ಯಾಯಾಂಗದ ಘನತೆಗೆ ಧಕ್ಕೆ ತರುತ್ತಿದ್ದಾರೆಂದು ತಿಳಿಸಿದರು.