ದಾವಣಗೆರೆ : ಕರ್ನಾಟಕ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಐಟಿ ಘಟಕದ ಮುಖ್ಯಸ್ಥ ಅಮಿತ್ ಮಾಳಾವಿಯಾ ಟ್ವಿಟ್ ಯಡವಟ್ಟಿನ ಬೆನ್ನಲ್ಲೇ ಆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭ್ರಷ್ಟ ಎಂದು ಕರೆದಿದ್ದಾರೆ.
ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲಿಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು,ಯಡಿಯೂರಪ್ಪ ಸರ್ಕಾರ ಅತ್ಯಂತ ಭ್ರಷ್ಟ ಸರ್ಕಾರ ಎಂದು ಇತ್ತೀಚಿಗೆ ನಿವೃತ್ತರಾಗಿರುವ ಸುಪ್ರೀಂಕೋರ್ಟ್ ನ್ಯಾಯಾಧೀಶರು ಹೇಳಿದ್ದಾರೆ ಎಂದು ಅಮಿತ್ ಶಾ ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಟೀಕಿಸುವ ಭರದಲ್ಲಿ ಅಮಿತ್ ಶಾ, ಸಿದ್ದರಾಮಯ್ಯ ಹೆಸರು ಬದಲು ಯಡಿಯೂರಪ್ಪ ಹೆಸರು ಬಳಸಿದರು.
ಈ ಸಂದರ್ಭದಲ್ಲಿ ಯಡಿಯೂರಪ್ಪ ಅಮಿತ್ ಶಾ ಪಕ್ಕದಲ್ಲಿಯೇ ಕುಳಿತಿದ್ದರು. ನಂತರ ಅಮಿತ್ ಶಾ ಸರಿ ಮಾಡಿಕೊಂಡರು.
ಈ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟರ್ ನಲ್ಲಿ ಪ್ರತಿಕ್ರಿಯೆ ನೀಡಿದ್ದು, ಅಂತಿಮವಾಗಿ ಅಮಿತ್ ಶಾ ಸತ್ಯ ಒಪ್ಪಿಕೊಂಡಿದ್ದಾರೆ ಎಂದು ಲೇವಡಿ ಮಾಡಿದ್ದಾರೆ